ಉಡುಪಿ, ನ. 18 (DaijiworldNews/SM): ಪ್ರಸ್ತುತ ಜಿಲ್ಲೆಯಲ್ಲಿರುವ ಜಿಲ್ಲಾಸ್ಪತ್ರೆಯನ್ನು 250 ಹಾಸಿಗೆಗಳ ಸಾಮರ್ಥ್ಯಕ್ಕೆ ಮೇಲ್ದರ್ಜೆಗೇರಿಸಿ, ಇತರೆ ಮೂಲಭೂತ ಸೌಕರ್ಯಗಳೊಂದಿಗೆ 115 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ಪೂರ್ಣಗೊಳಿಸಲು ಈಗಾಗಲೇ ಅನುಮೋದನೆ ದೊರೆತಿದ್ದು, ನೂತನ ಜಿಲ್ಲಾಸ್ಪತ್ರೆ ಕಟ್ಟಡ ಪೂರ್ಣಗೊಳ್ಳುವವರೆಗೆ, ಈಗಿರುವ ಜಿಲ್ಲಾಸ್ಪತ್ರೆಯನ್ನು ಪೂರ್ಣ ಪ್ರಮಾಣದಲ್ಲಿ ಬ್ರಹ್ಮಾವರಕ್ಕೆ ಸ್ಥಳಾಂತರಿಸುವ ಕುರಿತಂತೆ ಬುಧವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿ.ಪಂ. ಅಧ್ಯಕ್ಷ ದಿನಕರ ಬಾಬು ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಚರ್ಚಿಸಲಾಯಿತು.

ನೂತನ ಜಿಲ್ಲಾಸ್ಪತ್ರೆ ಕಟ್ಟಡ ಕಾಮಗಾರಿಯು 2021ರ ಫೆಬ್ರವರಿ ಅಥವಾ ಮಾರ್ಚ್ ತಿಂಗಳಲ್ಲಿ ಆರಂಭಗೊಳ್ಳಲಿದ್ದು, ನೂತನ ಕಟ್ಟಡ ಕಾಮಗಾರಿಯ ಸಂದರ್ಭದಲ್ಲಿ ರೋಗಿಗಳನ್ನು ಹಾಗೂ ಸಂಪೂರ್ಣ ಉಪಕರಣಗಳನ್ನು ಸ್ಥಳಾಂತರಿಸುವುದು ಅಗತ್ಯವಿದ್ದು, ಅದಕ್ಕಾಗಿ ಹೊಸ ಕಟ್ಟಡ ಪೂರ್ಣಗೊಳ್ಳುವರೆಗೆ ತಾತ್ಕಾಲಿಕವಾಗಿ ಬ್ರಹ್ಮಾವರಕ್ಕೆ ಸ್ಥಳಾಂತರಿಸುವುದು ಅಗತ್ಯವಿದೆ ಎಂದು ಶಾಸಕ ರಘುಪತಿ ಭಟ್ ಮತ್ತು ಎಲ್ಲಾ ಸದಸ್ಯರು ಅಭಿಪ್ರಾಯ ವ್ಯಕ್ತಪಡಿಸಿದರು. ಈ ಕುರಿತಂತೆ ಬ್ರಹ್ಮಾವರದಲ್ಲಿ ಸ್ಥಳ ಪರಿಶೀಲನೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಲು ಸಭೆಯಲ್ಲಿ ನಿರ್ಧರಿಸಲಾಯಿತು.
ಉಡುಪಿ ಜಿಲ್ಲೆಯ ಜಿಲ್ಲಾ ಆಸ್ಪತ್ರೆಯನ್ನು 250 ಹಾಸಿಗೆಗಳ ಸಾಮರ್ಥ್ಯಕ್ಕೆ ಮೇಲ್ಮರ್ಜೆಗೇರಿಸಿ ಆಸ್ಪತ್ರೆ ಕಟ್ಟಡ, ಸಿಬ್ಬಂದಿ ವಸತಿ ಗೃಹಗಳು ಹಾಗೂ ಇತರೆ ಮೂಲಭೂತ ಸೌಲಭ್ಯ ಕಾಮಗಾರಿಗಳನ್ನು 115 ಕೋಟಿ ರೂ. ಅಂದಾಜು ವೆಚ್ಚದಲ್ಲಿ ನಿರ್ಮಾಣವಾಗಲಿದೆ.
ಉಡುಪಿ ಜಿಲ್ಲೆ ರಚನೆ ಆದ ನಂತರ ತಾಲೂಕು ಆಸ್ಪತ್ರೆ ಎಂಬುದರ ಬದಲಿಗೆ ಜಿಲ್ಲಾ ಆಸ್ಪತ್ರೆ ಎಂದು ಪದನಾಮಾಂಕಿತವಾಗಿದ್ದು, ಸದರಿ ಆಸ್ಪತ್ರೆಯಲ್ಲಿ ಈ ಹಿಂದೆ ಇದ್ದ 124 ಹಾಸಿಗೆಗೆ ಅನ್ವಯಿಸುವ ಸಿಬ್ಬಂದಿಗಳು ಹಾಗೂ ಕಟ್ಟಡದ ವ್ಯವಸ್ಥೆ ಹಾಗೆಯೇ ಮುಂದುವರೆದಿದ್ದು, ಜಿಲ್ಲಾ ಆಸ್ಪತ್ರೆಗೆ ಬೇಕಾಗುವಂತಹ ಮೂಲಭೂತ ಅಗತ್ಯ ಸೌಕರ್ಯವಾದಂತಹ 250 ಹಾಸಿಗೆಗಳ ಸಿಬ್ಬಂದಿ ಇದುವರೆಗೆ ಮಂಜೂರಾಗಿಲ್ಲ. ಇದರಿಂದ ಸಾರ್ವಜನಿಕರಿಗೆ ಅಗತ್ಯ ಆರೋಗ್ಯ ಸೇವೆಯನ್ನು ಸಕಾಲದಲ್ಲಿ ಒದಗಿಸಲು ತೊಂದರೆಯಾಗುತ್ತಿದ್ದು, ಜಿಲ್ಲಾ ಆಸ್ಪತ್ರೆಯನ್ನಾಗಿ ಮೇಲ್ಮರ್ಜೆಗೇರಿಸಲು ಅಗತ್ಯವಿರುವ ಕಟ್ಟಡ ಹಾಗೂ ಸಿಬ್ಬಂದಿಯನ್ನು ನೇಮಿಸುವ ಅವಶ್ಯಕತೆಯ ಕುರಿತು ಪ್ರಸ್ತಾಪಿಸಲಾಗಿತ್ತು.