ಮಂಗಳೂರು, ಜೂ08: ವಿಧಾನ ಪರಿಷತ್ತಿನ ನೈಋತ್ಯ ಶಿಕ್ಷಕರ ಹಾಗೂ ನೈಋತ್ಯ ಪದವೀಧರ ಕ್ಷೇತ್ರಗಳಿಗೆ ಇಂದು ಚುನಾವಣೆ ನಡೆಯುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಿಕ್ಷಕರ ಕ್ಷೇತ್ರಕ್ಕೆ 14 ಹಾಗೂ ಪದವೀಧರ ಕ್ಷೇತ್ರಕ್ಕೆ 23 ಮತಗಟ್ಟೆಗಳಲ್ಲಿ ಮತದಾನ ನಡೆಯುತ್ತಿದೆ.
ವಿಧಾನ ಪರಿಷತ್ತಿನ ನೈಋತ್ಯ ಶಿಕ್ಷಕರ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಮಂಗಳೂರಿನ ಹಂಪನಕಟ್ಟೆ ವಿಶ್ವವಿದ್ಯಾಲಯ ಕಾಲೇಜಿನಲ್ಲಿ ತಮ್ಮ ಮತ ಚಲಾಯಿಸಿದ್ದಾರೆ.
ನೈಋತ್ಯ ಶಿಕ್ಷಕರ ಕ್ಷೇತ್ರ ವ್ಯಾಪ್ತಿಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆಯ ಚನ್ನಗಿರಿ ಹಾಗೂ ಹೊನ್ನಾಳಿ ತಾಲೂಕುಗಳು ಬರಲಿದ್ದು, ಒಟ್ಟು 20,481 ಮತದಾರರಿದ್ದು, 12 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಪದವೀಧರರ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 7,185 ಮತದಾರರಿದ್ದು, 8 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಬಿಜೆಪಿಯಿಂದ ಅಯನೂರು ಮಂಜುನಾಥ್, ಕಾಂಗ್ರೆಸ್ ಪಕ್ಷದಿಂದ ಎಸ್ ಪಿ ದಿನೇಶ್, ಅರುಣ್ ಕುಮಾರ್ ಜೆಡಿಎಸ್ ನಿಂದ ಸ್ಪರ್ಧಿಸುತ್ತಿದ್ದು, ಪದವೀಧರ ಕ್ಷೇತ್ರದಲ್ಲಿ ಕಣದಲ್ಲಿರುವ ಪ್ರಮುಖ ಅಭ್ಯರ್ಥಿಗಳಾಗಿದ್ದಾರೆ. ಇನ್ನು ಶಿಕ್ಷಕ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕ್ಯಾ. ಗಣೇಶ್ ಕಾರ್ಣಿಕ್, ಜೆಡಿಎಸ್ ನಿಂದ ಬೋಜೇಗೌಡ ಹಾಗೂ ಕಾಂಗ್ರೆಸ್ ಪಕ್ಷದಿಂದ ಕೆ.ಕೆ. ಮಂಜುನಾಥ್ ಕಣದಲ್ಲಿರುವ ಪ್ರಮುಖರಾಗಿದ್ದಾರೆ.
ಜೂನ್ 12ಕ್ಕೆ ಮತ ಎಣಿಕೆ ನಡೆಯಲಿದ್ದು, ಅಂದೇ ಫಲಿತಾಂಶ ಪ್ರಕಟಗೊಳ್ಳಲಿದೆ.