ಉಡುಪಿ, ಡಿ.01 (DaijiworldNews/MB) : "ಕೊರೊನಾ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸದಿದ್ದರೆ, ಅಧಿಕಾರಿಗಳ ವಿರುದ್ದ ಕ್ರಮಕೈಗೊಳ್ಳಲಾಗುವುದು" ಎಂದು ಜಿಲ್ಲಾಧಿಕಾರಿ ಜಿ ಜಗದೀಶ್ ಹೇಳಿದರು.


ಈ ಬಗ್ಗೆ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, "ಜಿಲ್ಲೆಯಲ್ಲಿ ಕೊರೊನಾ ವೈರಸ್ನ ಎರಡನೇ ಅಲೆಯನ್ನು ನಾವು ಹೇಗೆ ನಿಯಂತ್ರಿಸಬಹುದು ಎಂಬುದರ ಕುರಿತು ಚರ್ಚಿಸಲು ನಾನು ತಜ್ಞರೊಂದಿಗೆ ಸಭೆ ನಡೆಸಿದ್ದೇನೆ" ಎಂದರು.
"ಮಾರುಕಟ್ಟೆಯಲ್ಲಿ ಮಾರಾಟಗಾರರು, ಅಂಗಡಿ ಮಾಲೀಕರು, ಗ್ರಾಹಕರೊಂದಿಗೆ ವ್ಯವಹರಿಸುವಾಗ ಮಾಸ್ಕ್ ಧರಿಸುವುದಿಲ್ಲ ಎಂದು ನಾನು ಗಮನಿಸಿದ್ದೇನೆ. ಯಾವುದೇ ಮುಲಾಜಿಲ್ಲದೆ ದಂಡ ವಿಧಿಸುವಂತೆ ನಾನು ಸಿಎಂಸಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಆದರೆ ಯಾವುದೇ ಅಧಿಕಾರಿಗಳು ಈ ಆದೇಶವನ್ನು ಪಾಲಿಸಿಲ್ಲ ಎಂದು ಕಂಡುಬಂದಿದೆ. ಆದ್ದರಿಂದ, ಅಂತಹ ಅಧಿಕಾರಿಗಳಿಗೆ ಶೋ-ಕಾಸ್ ನೋಟಿಸ್ ನೀಡುವಂತೆ ನಾನು ಸಂಬಂಧಪಟ್ಟ ಇಲಾಖೆಗೆ ನಿರ್ದೇಶನ ನೀಡಿದ್ದೇನೆ" ಎಂದು ತಿಳಿಸಿದರು.
''ಡಿಸೆಂಬರ್ ಅಂತ್ಯದವರೆಗೆ ನಾವು ಕೊರೊನಾ ಮಾರ್ಗಸೂಚಿಗಳನ್ನು ಅನುಸರಿಸಬೇಕಾಗಿದೆ. ಜನರು ಕೊರೊನಾ ಮಾರ್ಗಸೂಚಿಯನ್ನು ಉಲ್ಲಂಘಿಸಿ ದೊಡ್ಡ ಸಮಾರಂಭಗಳನ್ನು ಆಯೋಜಿಸುತ್ತಿದ್ದಾರೆ. ಇನ್ನು ಮುಂದೆ, ಜನರು ಕಾರ್ಯಕ್ರಮಗಳು, ವಿವಾಹಗಳು, ಧಾರ್ಮಿಕ ಕಾರ್ಯಗಳು, ಉತ್ಸವಗಳು, ಕುಟುಂಬ ಕಾರ್ಯಕ್ರಮಗಳನ್ನು ಆಯೋಜಿಸಬೇಕಾದರೂ ತಹಶೀಲ್ದಾರರಿಂದ ಅನುಮತಿ ಪಡೆಯಬೇಕು'' ಎಂದು ಹೇಳಿದರು.
"ಕಾಲೇಜುಗಳನ್ನು ಪುನರಾರಂಭಿಸಿದ ನಂತರ 54 ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ಆಗಿದೆ. ನಾನು ಶಿಕ್ಷಣ ಸಂಸ್ಥೆಗಳೊಂದಿಗೆ ಸಭೆ ನಡೆಸಿದ್ದೇನೆ. ಮಾರ್ಗಸೂಚಿಗಳನ್ನು ಹೇಗೆ ಅನುಸರಿಸಬೇಕು ಎಂಬುದರ ಕುರಿತು ಅವರಿಗೆ ಸಲಹೆ ನೀಡಿದ್ದೇನೆ. ಆರೋಗ್ಯ ಮಾರ್ಗಸೂಚಿಗಳನ್ನು ಅನುಸರಿಸಲಾಗಿದೆಯೆ ಅಥವಾ ಇಲ್ಲವೇ ಎಂದು ಪರಿಶೀಲಿಸಲು ನಾವು ತಾಲ್ಲೂಕು ಮಟ್ಟದ ನೋಡಲ್ ಅಧಿಕಾರಿಗಳನ್ನು ನೇಮಿಸಲು ಹಾಗೂ ಧಿಡೀರ್ ಭೇಟಿ ನೀಡಲು ನಿರ್ಧರಿಸಿದ್ದೇವೆ" ಎಂದು ತಿಳಿಸಿದರು.