ಮಂಗಳೂರು, ಡಿ.02 (DaijiworldNews/PY): ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ರಾಜ್ಯದ 30 ಜಿಲ್ಲೆಗಳಲ್ಲಿ ಒಟ್ಟು 5,762 ಗ್ರಾಮ ಪಂಚಾಯತ್ಗಳಿಗೆ 2 ಹಂತದಲ್ಲಿ ಚುನಾವಣೆಯನ್ನು ನಡೆಸಲು ಘೋಷಿಸಿರುತ್ತದೆ. ಅದರಂತೆ ಜಿಲ್ಲೆಯಲ್ಲಿ ಡಿಸೆಂಬರ್ 22 ಮತ್ತು 27 ರಂದು ಮತದಾನ ನಡೆಯಲಿದೆ.

ಈ ಹಿನ್ನೆಲೆಯಲ್ಲಿ ಬೆಳೆ ರಕ್ಷಣೆಗೆ ಮತ್ತು ಆತ್ಮ ರಕ್ಷಣೆಗೆ ಶಸ್ತ್ರಾಸ್ತ್ರ ಪರವಾನಿಗೆ ಹೊಂದಿರುವ ಎಲ್ಲಾ ಪರವಾನಿಗೆದಾರರು ತಮ್ಮ ಪರವಾನಿಗೆಯಲ್ಲಿ ಹೊಂದಿರುವ ಎಲ್ಲಾ ಶಸ್ತ್ರಾಸ್ತ್ರ್ತ್ರಗಳನ್ನು ಭಾರತೀಯ ಶಸ್ತ್ರಾಸ್ತ್ರ ಕಾಯ್ದೆಯಡಿ ನಮೂನೆ ನಂಬರ್ 8 ರ ಪರವಾನಿಗೆ ಹೊಂದಿರುವ ಅಧೀಕೃತ ಕೋವಿ ಮದ್ದುಗುಂಡು ವ್ಯಾಪಾರಿಗಳಲ್ಲಿ ಅಥವಾ ಹತ್ತಿರದ ಪೊಲೀಸ್ ಠಾಣೆಗಳಲ್ಲಿ ಠೇವಣಿ ಇಡುವಂತೆ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ.
ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ಹಾಗೂ ಜಿಲ್ಲೆಯ ಬಂಟ್ವಾಳ ತಾಲೂಕಿನ ಪುದು ಗ್ರಾಮ ಪಂಚಾಯತ್ ವ್ಯಾಪ್ತಿಯನ್ನು ಹೊರತುಪಡಿಸಿ ಉಳಿದಂತೆ ಬಂಟ್ವಾಳ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಪರವಾನಿಗೆದಾರರು ಡಿಸೆಂಬರ್ 14 ರಿಂದ 21 ರೊಳಗೆ ಶಸ್ತ್ರಾಸ್ತ್ರಾ ಠೇವಣಿಯನ್ನು ಇಡಬೇಕು.
ಬೆಳ್ತಂಗಡಿ ತಾಲೂಕಿನ ವೇಣೂರು ಮತ್ತು ಆರಂಬೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯನ್ನು ಹೊರತುಪಡಿಸಿ ಉಳಿದಂತೆ ಬೆಳ್ತಂಗಡಿ, ಸುಳ್ಯ, ಪುತ್ತೂರು ಮತ್ತು ಕಡಬ ತಾಲೂಕಿಗೆ ಸಂಬಂಧಪಟ್ಟ ಎಲ್ಲಾ ಪರವಾನಿಗೆದಾರರು ಡಿಸೆಂಬರ್ 19 ರಿಂದ ಡಿಸೆಂಬರ್ 26 ರೊಳಗೆ ಶಸ್ತ್ರಾಸ್ತ್ರ ಠೇವಣಿಯನ್ನು ಇಡಬೇಕು.
ಚುನಾವಣಾ ಫಲಿತಾಂಶ ಘೋಷಣೆಯಾದ ದಿನಾಂಕದಿಂದ ಒಂದು ವಾರದ ನಂತರ ಠೇವಣಿ ಇಡಲಾದ ಶಸ್ತ್ರಾಸ್ತ್ರಗಳನ್ನು ಪೊಲೀಸ್ ಠಾಣೆ, ಅಧೀಕೃತ ಕೋವಿ ಮತ್ತು ಮದ್ದುಗುಂಡು ಡೀಲರ್ಗಳಿಂದ ಪರವಾನಿಗೆದಾರರು ಶಸ್ತ್ರಾಸ್ತ್ರಗಳನ್ನು ಮರು ಪಡೆದುಕೊಳ್ಳಬೇಕು. ಪರವಾನಿಗೆದಾರರಿಗೆ ಬೆಳೆರಕ್ಷಣೆಗಾಗಿ ಶಸ್ತ್ರಾಸ್ತ್ರದ ತೀರಾ ಅವಶ್ಯಕತೆ ಇದ್ದರೆ ಮಾತ್ರ ಸಂಬಂಧಪಟ್ಟವರು ಪೂರಕ ದಾಖಲೆಗಳೊಂದಿಗೆ ಸಂಬಂಧಪಟ್ಟ ತಾಲೂಕು ತಹಶೀಲ್ದಾರರಿಗೆ ಅಹವಾಲುಗಳನ್ನು ಸಲ್ಲಿಸಬೇಕು. ಹಾಗೂ ಆತ್ಮ ರಕ್ಷಣೆಗಾಗಿ ಆಯುಧದ ತೀರಾ ಅವಶ್ಯಕತೆ ಇದ್ದರೆ ಸಂಬಂಧಪಟ್ಟವರು ಪೂರಕ ದಾಖಲೆಗಳೊಂದಿಗೆ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಅಹವಾಲುಗಳನ್ನು ಸಲ್ಲಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳ ಪ್ರಕಟಣೆ ತಿಳಿಸಿದೆ.