ಮಂಗಳೂರು, ಜೂ15: ಜಿಲ್ಲೆಯ ಉಸ್ತುವಾರಿ ಸಚಿವನಾಗಿ ನನಗೆ ಮಹತ್ವದ ಜವಾಬ್ದಾರಿ ಸಿಕ್ಕಿದೆ ಎಂದು ನಗರಾಡಳಿತ ಮತ್ತು ವಸತಿ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.
ನಗರದ ಖಾಸಗಿ ಹೋಟೆಲಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಚಿವನಾಗಿ ನನಗೆ ಮಹತ್ವದ ಜವಾಬ್ದಾರಿ ಸಿಕ್ಕಿರುವುದು ಅಗ್ನಿ ಪರೀಕ್ಷೆಯಿದ್ದಂತೆ. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನಾನು ಶ್ರಮಿಸುತ್ತೇನೆ. ಮಂಗಳೂರು ಸ್ಮಾರ್ಟ್ ಸಿಟಿ ಮತ್ತು ಎಡಿಬಿ ಎರಡನೇ ಹಂತದ ಕಾಮಗಾರಿಗೆ ನಾನು ಮೊದಲ ಮಹತ್ವ ಕೊಡುತ್ತೇನೆ. ಈ ಎರಡೂ ಕಾಮಗಾರಿಗಳಲ್ಲಿರುವ ಅಡೆತಡೆಗಳನ್ನು ಪರಿಶೀಲಿಸಿ ಸೂಕ್ತ ಪರಿಹಾರ ಕಲ್ಪಿಸುತ್ತೇನೆ ಎಂದು ಹೇಳಿದರು.
ಉಸ್ತುವಾರಿ ಸಚಿವನಾಗಿ ನಾನು ಜಿಲ್ಲೆಯ ಅಭಿವೃದ್ಧಿಗೆ ಗಮನ ಕೊಡುವುದರೊಂದಿಗೆ ಯಾವುದೇ ಜಾತಿ, ಧರ್ಮದ ಭೇದ ಭಾವವಿಲ್ಲದೆ ಜನರ ಕಷ್ಟಗಳಿಗೆ ಸ್ಪಂದಿಸುತ್ತೇನೆ. ಮಾತ್ರವಲ್ಲ ಜನಪರ ಕೆಲಸಗಳನ್ನು ಮಾಡುತ್ತೇನೆ ಎಂದು ಭರವಸೆ ನೀಡಿದರು.
ಕರಾವಳಿ ಜಿಲ್ಲೆಯ ಎಲ್ಲಾ ಶಾಸಕರೊಂದಿಗೆ ಉತ್ತಮ ಸಂಪರ್ಕ ಇಟ್ಟುಕೊಳ್ಳುತ್ತೇನೆ. ಅವರ ಸಲಹೆ ಸೂಚನೆಗಳನ್ನು ಪಡೆದುಕೊಂಡು ಅಭಿವೃದ್ಧಿಯ ಕೆಲಸಗಳನ್ನು ಮಾಡುತ್ತೇನೆ. ಜನಪರ ಯೋಜನೆಗಳಿಗೆ ಕೇಂದ್ರದ ಅನುದಾನ ಸಿಗುವಂತೆ ಶ್ರಮಿಸುತ್ತೇನೆ ಎಂದು ಹೇಳಿದರು.