ಪುತ್ತೂರು, ಜ.20 (DaijiworldNews/HR): "ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಪಕ್ಷ ಮತ್ತು ಅದರ ನಾಯಕರ ವಿರುದ್ಧ ಬಹಿರಂಗವಾಗಿ ಮಾತನಾಡುವುದನ್ನು ನಿಲ್ಲಿಸದಿದ್ದಲ್ಲಿ ಕೇಂದ್ರ ಶಿಸ್ತು ಸಮಿತಿ ಅವರ ವಿರುದ್ಧ ಕ್ರಮ ಕೈಗೊಳ್ಳಲಿದೆ" ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದ ಗೌಡ ಎಚ್ಚರಿಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಯತ್ನಾಳ್ ಅವರಿಗೆ ಪದೇ ಪದೇ ಎಚ್ಚರಿಕೆ ನೀಡಿದ ನಂತರವೂ ಅವರು ಅದೇ ರೀತಿಯಾಗಿ ವರ್ತಿಸುತ್ತಿದ್ದಾರೆ. ಈ ಹಿಂದೆ ನಾನು ಅವರನ್ನು ಪಕ್ಷದಿಂದ ಹೊರಹಾಕಿದ್ದೆ. ಈಗ ಮತ್ತೆ ಇದೇ ರೀತಿ ವರ್ತಿಸುತ್ತಿದ್ದಾರೆ. ಇನ್ನು ಮುಂದೆಯೂ ಪಕ್ಷವನ್ನು ದೂಷಿಸುವುದನ್ನು ನಿಲ್ಲಿಸದಿದ್ದಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು" ಎಂದರು.
ಇನ್ನು "ವಾಜಪೇಯಿ ನೇತೃತ್ವದ ಸರ್ಕಾರದಲ್ಲಿ ಮಂತ್ರಿಯಾಗಿದ್ದ ಯತ್ನಾಳ್ ಅವರಿಗೆ ಇಂತಹ ನಡವಳಿಕೆಗಳು ಶೋಭೆಯಲ್ಲ. ಅವರಿಗೆ ಏನಾದರೂ ಅಸಮಾಧಾನವಿದ್ದರೆ ಅದನ್ನು ಪಕ್ಷದ ಒಳಗೆ ಚರ್ಚಿಸಿ ಸರಿಪಡಿಸಿಕೊಳ್ಳಬೇಕು ಹೊರತು ಸಾರ್ವಜನಿಕವಾಗಿ ಅಲ್ಲ. ರಾಜ್ಯ ನಾಯಕರು ದೆಹಲಿಗೆ ಭೇಟಿ ನೀಡಿ ಕೇಂದ್ರ ನಾಯಕರನ್ನು ಭೇಟಿಯಾದರೆ ತಪ್ಪೇನಿಲ್ಲ. ಸಾರ್ವಜನಿಕ ಟೀಕೆಗಳನ್ನು ಎಂದಿಗೂ ಸಹಿಸುವುದಿಲ್ಲ" ಎಂದು ಹೇಳಿದ್ದಾರೆ.