ಮಂಗಳೂರು ಜು 05 : ದಕ್ಷಿಣ ಕನ್ನಡ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 169ರ ಗುರುಪುರ ಸೇತುವೆಯ ಪಕ್ಕದಲ್ಲಿ 38 ಕೋಟಿ ರೂಪಾಯಿ ವೆಚ್ಚದಲ್ಲಿ ಹೊಸ ಸೇತುವೆ ನಿರ್ಮಾಣಕ್ಕೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯಕ್ಕೆ 2018 ರ ಮಾರ್ಚ್ ನಲ್ಲಿ ಪ್ರಸ್ತಾವ ಸಲ್ಲಿಸಲಾಗಿದೆ. ಕೇಂದ್ರದ ಅನುಮೋದನೆ ಸಿಕ್ಕಿದ ತಕ್ಷಣ ಟೆಂಡರ್ ಕರೆದು ಕಾಮಗಾರಿ ಆರಂಭಿಸಲಾಗುವುದೆಂದು ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ತಿಳಿಸಿದ್ದಾರೆ.
ವಿಧಾನ ಪರಿಷತ್ ಕಾಂಗ್ರೆಸ್ ಸದಸ್ಯ ಐವನ್ ಡಿಸೋಜ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನದಿಯಲ್ಲಿ ಪ್ರವಾಹ ಹಾಗೂ ನೀರಿನ ಹರಿವು ಜಾಸ್ತಿ ಇರುವುದರಿಂದ ಸದ್ಯದ ಪರಿಸ್ಥಿತಿಯಲ್ಲಿ ಸೇತುವೆ ದುರಸ್ಥಿ ಕಾಮಗಾರಿ ನಡೆಸಲು ಅಸಾಧ್ಯ. ನೀರಿನ ಹರಿವು ಕಡಿಮೆಯಾದ ಅನಂತರ ದುರಸ್ತಿ ಕಾಮಗಾರಿ ಕೈಗೊಳ್ಳಲಾಗುವುದು ಎಂದರು