ಮಂಗಳೂರು, ಜ.28 (DaijiworldNews/MB) : ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಕಡಬ ತಾಲೂಕು ಪತ್ರಕರ್ತರ ಸಂಘದ ಆತಿಥ್ಯದಲ್ಲಿ, ಜಿಲ್ಲಾಡಳಿತ, ವಿವಿಧ ಇಲಾಖೆಗಳ ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಪತ್ರಕರ್ತರ ಗ್ರಾಮ ವಾಸ್ತವ್ಯ ಮತ್ತು ಜಾಗೃತಿ ಶಿಬಿರ' ಜ.31ರಂದು ಕೊಂಬಾರು ದ.ಕ.ಜಿ.ಪಂ. ಉ.ಹಿ.ಪ್ರಾ.ಶಾಲೆಯಲ್ಲಿ ನಡೆಯಲಿದೆ.


ಬೆಳಗ್ಗೆ 10 ಗಂಟೆಗೆ ಪತ್ರಕರ್ತರ ಗ್ರಾಮ ವಾಸ್ತವ್ಯದ ಉದ್ಘಾಟನೆಯನ್ನು ಗ್ರಾಮೀಣಾವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ನೆರವೇರಿಸಲಿದ್ದಾರೆ. ಆರೋಗ್ಯ ತಪಾಸಣಾ ಶಿಬಿರವನ್ನು ಬಂದರು ಮತ್ತು ಮೀನುಗಾರಿಕಾ ಸಚಿವ ಎಸ್. ಅಂಗಾರ ಉದ್ಘಾಟಿಸಲಿದ್ದಾರೆ.
ಕುತ್ತೂರು ಮತ್ತು ಮಡಪ್ಪಾಡಿಯಲ್ಲಿ ನಡೆದ ಪತ್ರಕರ್ತರ ಗ್ರಾಮ ವಾಸ್ತವ್ಯದ ಮಾಹಿತಿ ಕೈಪಿಡಿಯನ್ನು ಮಂಗಳೂರು ಶಾಸಕ ಯು.ಟಿ. ಖಾದರ್ ಬಿಡುಗಡೆಗೊಳಿಸಲಿದ್ದಾರೆ. ಸ್ವಚ್ಛ ಪರಿಸರ, ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನಕ್ಕೆ ದ.ಕ.ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಚಾಲನೆ ನೀಡಲಿದ್ದಾರೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆಯಲ್ಲಿ ಸಮಾರಂಭ ನಡೆಯಲಿದೆ.
ಮುಖ್ಯ ಅತಿಥಿಗಳಾಗಿ ಶಾಸಕರಾದ ಸಂಜೀವ ಮಠಂದೂರು, ಹರೀಶ್ ಪೂಂಜಾ, ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ಎಸ್.ಎಲ್. ಭೋಜೇಗೌಡ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.