ಉಡುಪಿ, ಫೆ.11 (DaijiworldNews/PY): ನಗರದ ವಾಣಿಜ್ಯ ಸಂಕೀರ್ಣಗಳನ್ನು ನಿರ್ಮಿಸುವಾಗ ಪಾರ್ಕಿಂಗ್ಗೆ ಜಾಗ ಮೀಸಲಿಟ್ಟು, ನಿರ್ಮಾಣದ ನಂತರ ಪಾರ್ಕಿಂಗ್ಗೆ ಜಾಗ ಬಿಡದೇ ಆ ಸ್ಥಳವನ್ನು ಅತಿಕ್ರಮಿಸಿರುವವರ ಟ್ರೇಡ್ ಲೈಸೆನ್ಸ್ ರದ್ದುಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ನಗರಸಭೆಯ ಪೌರಾಯುಕ್ತರಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದರು.


ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
"ಉಡುಪಿ ನಗರದಲ್ಲಿ ಪಾರ್ಕಿಂಗ್ ಸಮಸ್ಯೆಯಿಂದ ವಾಹನಗಳ ಸುಗಮ ಸಂಚಾರಕ್ಕೆ ಹಾಗೂ ಪಾದಚಾರಿಗಳಿಗೆ ಮತ್ತು ವಾಹನಗಳ ಪಾರ್ಕಿಂಗ್ಗೆ ತೀವ್ರ ಸಮಸ್ಯೆಯಾಗುತ್ತಿದ್ದು, ವಾಣಿಜ್ಯ ಕಟ್ಟಡಗಳು ಮತ್ತು ವಸತಿ ಸಮುಚ್ಛಯಗಳನ್ನು ನಿರ್ಮಿಸುವಾಗ, ಪಾರ್ಕಿಂಗ್ಗೆ ಜಾಗ ಮೀಸಲಿಟ್ಟು, ನಿರ್ಮಾಣದ ನಂತರ ಆ ಸ್ಥಳವನ್ನು ಅತಿಕ್ರಮಿಸಿ, ಅನಧಿಕೃತವಾಗಿ ಕಟ್ಟಡಗಳನ್ನು ನಿರ್ಮಿಸಿರುವ ಸಂಬಂಧಪಟ್ಟ ಮಾಲೀಕರಿಗೆ 15 ದಿನದಲ್ಲಿ ತೆರವುಗೊಳಿಸುವ ಕುರಿತು ನೊಟೀಸ್ ನೀಡಿ, ಅತಿಕ್ರಮಣ ತೆರವು ಆಗದಿದ್ದಲ್ಲಿ ಸಂಬಂಧಪಟ್ಟ ವಾಣಿಜ್ಯ ಸಂಸ್ಥೆಯ ಟ್ರೇಡ್ ಲೈಸೆನ್ಸ್ ರದ್ದುಗೊಳಿಸುವುದು ಸೇರಿದಂತೆ ಅತಿಕ್ರಮಣ ಪ್ರದೇಶವನ್ನು ನಗರಸಭೆ ವತಿಯಿಂದ ತೆರವುಗೊಳಿಸಬೇಕು" ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚನೆ ನೀಡಿದರು.
"ನಗರ ಪ್ರದೇಶದಲ್ಲಿನ ಪಾಟ್ ಹೋಲ್ಗಳನ್ನು ಸೂಕ್ತ ರೀತಿಯಲ್ಲಿ ಮುಚ್ಚುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು, ಅನಿವಾರ್ಯ ಸಂದರ್ಭದಲ್ಲಿ ಮಾತ್ರ ಹಂಪ್ಸ್ಗಳನ್ನು ನಿರ್ಮಿಸಿ, ಹಂಪ್ಸ್ಗಳನ್ನು ವೈಜ್ಞಾನಿಕ ರೀತಿಯಲ್ಲಿ ನಿರ್ಮಿಸಬೇಕು" ಎಂದು ಸೂಚನೆ ನೀಡಿದರು.
"ರಾಷ್ಟ್ರೀಯ ಹೆದ್ದಾರಿಯಲ್ಲಿ ಈಗಾಗಲೇ ಗುರುತಿಸಲಾಗಿರುವ 34 ಬ್ಲಾಕ್ ಸ್ಪಾಟ್ಗಳಲ್ಲಿ ಅಗತ್ಯ ಮುನ್ನೆಚ್ಚರಿಕಾ ಸೂಚನಾ ಫಲಕಗಳನ್ನು ಅಳವಡಿಸಿ, ಪಾಟ್ ಹೋಲ್ಗಳನ್ನು ಮುಚ್ಚಲು ಅಗತ್ಯವಿರುವ ಕಾಮಗಾರಿಗಳನ್ನು ಕೈಗೊಂಡು ಅಪಘಾತಗಳು ಸಂಭವಿಸದಂತೆ ಎಚ್ಚರವಹಿಸಿ, ಕೋಟ ಬಳಿಯ ಅಂಡರ್ ಪಾಸ್ ಅನ್ನು ಅಗಲಗೊಳಿಸಿ ಏಕಕಾಲದಲ್ಲಿ ಎರಡು ವಾಹನಗಳು ಸಂಚರಿಸಲು ಸಾಧ್ಯವಾಗುವಂತೆ ಅಗಲಗೊಳಿಸುವ ಕುರಿತಂತೆ ಕ್ರಮ ಕೈಗೊಳ್ಳಬೇಕು" ಎಂದು ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಇಂಜಿನಿಯರ್ಗಳಿಗೆ ಸೂಚಿಸಿದರು.
"18 ವರ್ಷಕ್ಕಿಂತ ಕೆಳಗಿನ ಮಕ್ಕಳು ರಸ್ತೆ ಸುರಕ್ಷತಾ ನಿಯಮಗಳನ್ನು ಮೀರಿ, ವಾಹನಗಳನ್ನು ಚಲಾಯಿಸಿ ಅಪಘಾತಳಿಗೆ ಕಾರಣವಾಗುತ್ತಿದ್ದು, ಈ ಬಗ್ಗೆ ಜಿಲ್ಲೆಯ ಎಲ್ಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಮನ ಮುಟ್ಟುವಂತೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಿ, ಅಪ್ರಾಪ್ತ ಮಕ್ಕಳಿಗೆ ವಾಹನ ನೀಡಿದಲ್ಲಿ ಪೋಷಕರೂ ಸಹ ಜೈಲು ಶಿಕ್ಷೆಗೆ ಒಳಪಡುತ್ತಾರೆ ಎಂಬ ಬಗ್ಗೆ ಎಚ್ಚರ ಮೂಡಿಸಿ" ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.
ಕಲ್ಸಂಕ ಬಳಿ ಕೃಷ್ಣಮಠಕ್ಕೆ ಪ್ರವೇಶಿಸುವ ಸ್ಥಳದಲ್ಲಿನ ಸೇತುವೆಯನ್ನು ಅಗಲಗೊಳಿಸಿದಲ್ಲಿ ಅಲ್ಲಿ ವಾಹನ ದಟ್ಟಣೆಯನ್ನು ಕಡಿಮೆ ಮಾಡಲು ಸಾಧ್ಯವಾಗಲಿದೆ. ಜಿಲ್ಲೆಯಲ್ಲಿ ಸುಗಮ ಮತ್ತು ಸುರಕ್ಷಿತ ಸಂಚಾರಕ್ಕಾಗಿ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರ ಸಿದ್ಧಪಡಿಸಿರುವ ಕ್ರಿಯಾ ಯೋಜನೆಯಂತೆ, ಸಂಬಂಧಿಸಿದ ಇಲಾಖೆಗಳು ಕ್ರಿಯಾ ಯೋಜನೆಯ ಚಟುವಟಿಕೆಗಳು ಮತ್ತು ಅವುಗಳಿಗೆ ತಗಲುವ ಅಂದಾಜು ವೆಚ್ಚದ ವಿವರಗಳನ್ನು ಶೀಘ್ರದಲ್ಲಿ ಸಲ್ಲಿಸುವಂತೆ ಡಿಸಿ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿಇಓ ಡಾ. ನವೀನ್ ಭಟ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಎಎಸ್ಪಿ ಕುಮಾರ್ ಚಂದ್ರ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ ಪಡ್ನೇಕರ್, ಪೌರಾಯುಕ್ತ ಉದಯ ಶೆಟ್ಟಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ಗಂಗಾಧರ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.