ಮಂಗಳೂರು, ಫೆ. 11 (DaijiworldNews/SM): ನಗರ ಹೊರವಲಯದ ದೇರಳಕಟ್ಟೆಯ ಕಣಚೂರು ಮೆಡಿಕಲ್ ಕಾಲೇಜಿನಲ್ಲಿ ನಡೆದ ರ್ಯಾಗಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 11 ಮಂದಿ ವಿದ್ಯಾರ್ಥಿಗಳನ್ನು ಬಂಧಿಸಿದ್ದು, ಇಂತಹ ಘಟನೆಗಳು ನಡೆದಲ್ಲಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ನೀಡಿದ್ದಾರೆ.

ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ರ್ಯಾಗಿಂಗ್ ಪ್ರಕರಣದಲ್ಲಿ ಭಾಗಿಯಾದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು. ಯಾವುದೇ ಮುಲಾಜಿಲ್ಲದೆ ಅಂತಹವರ ವಿರುದ್ಧ ಕಠಿಣ ಕ್ರಮ ಜರಗಿಸಲಾಗುವುದು. ಕಿರಿಯ ವಿದ್ಯಾರ್ಥಿಗಳು ರ್ಯಾಗಿಂಗ್ ಗೆ ಒಳಗಾದ ಸಂದರ್ಭದಲ್ಲಿ ಸಂಬಂಧಿಸಿದವರ ಗಮನಕ್ಕೆ ತರಬೇಕು. ಬೆದರಿಕೆ ಹಾಕಿದ್ದಲ್ಲಿ ಹೆದರಿಕೊಂಡು ಸುಮ್ಮನಿರಬೇಡಿ. ಸಂಬಂಧಿಸಿದವರಿಗೆ ಮಾಹಿತಿ ನೀಡಿ. ತಕ್ಷಣ ಪೊಲೀಸ್ ಇಲಾಖೆ ಈ ಬಗ್ಗೆ ಕ್ರಮ ಕೈಗೊಳ್ಳಲಿದೆ ಎಂದು ಕಮಿಷನರ್ ಶಶಿಕುಮಾರ್ ಎಚ್ಚರಿಕೆ ನೀಡಿದ್ದಾರೆ.
ಇನ್ನು ಈ ವಿಚಾರದಲ್ಲಿ ಶಿಕ್ಷಣ ಸಂಸ್ಥೆಗಳು, ಮೆಡಿಕಲ್ ಕಾಲೇಜುಗಳು ಕೂಡ ಎಚ್ಚರಿಕೆಯಿಂದಿರಬೇಕೆಂದು ಕಮಿಷನರ್ ತಿಳಿಸಿದ್ದಾರೆ.