ಮಂಗಳೂರು, ಫೆ.13 (DaijiworldNews/PY): "ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಕಾಲೇಜು ವಿದ್ಯಾರ್ಥಿಗಳಿಗೆ ಯುವ ರೆಡ್ ಕ್ರಾಸ್ ಒಂದು ಉತ್ತಮ ವೇದಿಕೆ. ಆರೋಗ್ಯ ಮತ್ತು ಸಾಮಾಜಿಕ ಸ್ವಾಸ್ಥ್ಯಕ್ಕೆ ಸಂಬಂಧಿಸಿದಂತೆ ಕೆಲಸ ಮಾಡುತ್ತಿರುವ ಯುವ ರೆಡ್ ಕ್ರಾಸ್ ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಪೂರಕ" ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ ಸುಬ್ರಹ್ಮಣ್ಯ ಯಡಪಡಿತ್ತಾಯ ಅಭಿಪ್ರಾಯಪಟ್ಟರು.



ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸಭಾಂಗಣದಲ್ಲಿ ಶುಕ್ರವಾರ ನಡೆದ ಯುವ ರೆಡ್ ಕ್ರಾಸ್ ಸಲಹಾ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಂಗಳೂರು ವಿಶ್ವವಿದ್ಯಾಲಯದ ರೆಡ್ಕ್ರಾಸ್ ನೋಡಲ್ ಅಧಿಕಾರಿ ಡಾ. ಗಣಪತಿ ಗೌಡ, ಯುವ ರೆಡ್ ಕ್ರಾಸ್ 2019-20ನೇ ಸಾಲಿನಲ್ಲಿ ಕೈಗೊಂಡ ಕಾರ್ಯಕ್ರಮಗಳ ವಿವರ ನೀಡಿದರು. 2020-21ನೇ ಸಾಲಿನ ಆಯವ್ಯಯದಲ್ಲಿ ಕೈಗೆತ್ತಿಕೊಳ್ಳಬೇಕಾದ ವಿವಿಧ ಕಾರ್ಯಕ್ರಮಗಳು, ಪ್ರಶಸ್ತಿ ನೀಡಿಕೆ ಸಂಬಂಧಿಸಿದ ಕಾರ್ಯಸೂಚಿಗೆ ಸಭೆ ಅನುಮೋದನೆ ನೀಡಿತು.
ಕಾರ್ಯಕ್ರಮದಲ್ಲಿ ಸಲಹಾ ಸಮಿತಿಯ ಸದಸ್ಯ, ಕುಲಸಚಿವ ರಾಜು ಮೊಗವೀರ, ಹಣಕಾಸು ಅಧಿಕಾರಿ ಬಿ ನಾರಾಯಣ, ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ಅಪ್ಪಾಜಿಗೌಡ, ವಿಶೇಷಾಧಿಕಾರಿ ಡಾ. ಶ್ರೀಧರ ಮಣಿಯಾಲ, ದಕ್ಷಿಣ ಕನ್ನಡ ಜಿಲ್ಲಾ ರೆಡ್ ಕ್ರಾಸ್ ಅಧ್ಯಕ್ಷ ಶಾಂತರಾಮ ಶೆಟ್ಟಿ, ರಾಜ್ಯ ಪ್ರತಿನಿಧಿ ಯತೀಶ್ ಬೈಕಂಪಾಡಿ, ಉಡುಪಿ ಜಿಲ್ಲಾಧ್ಯಕ್ಷ ಡಾ. ತಲ್ಲೂರು ಶ್ರೀನಿವಾಸ ಶೆಟ್ಟಿ, ಕಾರ್ಯದರ್ಶಿ ಜಯರಾಮ ಆಚಾರ್ಯ, ವಿವಿ ಕಾಲೇಜಿನ ಪ್ರಾಂಶುಪಾಲ ಡಾ. ಎ ಹರೀಶ, ಕೊಡಗು ಜಿಲ್ಲಾ ಭಾರತೀಯ ರೆಡ್ ಕ್ರಾಸ್ ಕಾರ್ಯದರ್ಶಿ ಮುರಳೀಧರ್, ಎನ್ಎಸ್ಎಸ್ ಸಂಯೋಜನಾಧಿಕಾರಿ ಡಾ. ನಾಗರತ್ನ, ಗೋಣಿಕೊಪ್ಪ ಕಾವೇರಿ ಕಾಲೇಜಿನ ರೆಡ್ ಕ್ರಾಸ್ನ ಕಾರ್ಯಕ್ರಮ ಅಧಿಕಾರಿ ಕುಶಾಲಪ್ಪ, ಉಡುಪಿ ಜಿಲ್ಲೆಯ ತೆಂಕನಿಡಿಯೂರನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ ಕ್ರಾಸ್ ಕಾರ್ಯಕ್ರಮ ಅಧಿಕಾರಿ ಉದಯ ಶೆಟ್ಟಿ, ವಿದ್ಯಾರ್ಥಿ ಪ್ರತಿನಿಧಿಗಳಾದ ವಿಖ್ಯಾತ್ ಮತ್ತು ಭವಿಷ್ಯ ಶೆಟ್ಟಿ ಹಾಗೂ ವಿಶ್ವವಿದ್ಯಾನಿಲಯದ ಅಧಿಕಾರಿಗಳು ಭಾಗವಹಿಸಿದ್ದರು.
ನೋಡಲ್ ಅಧಿಕಾರಿ ಡಾ. ಗಣಪತಿ ಗೌಡ ಸಭೆಗೆ ಸ್ವಾಗತಿಸಿ ವಂದನಾರ್ಪಣೆಗೈದರು.