ಮಂಗಳೂರು, ಫೆ. 16 (DaijiworldNews/SM): ಅನರ್ಹರು ಹೊಂದಿರುವ ಬಿಪಿಎಲ್ ಪಡಿತರ ಚೀಟಿಯನ್ನು ಸ್ವಯಂಪ್ರೇರಿತವಾಗಿ ಸಂಬಂಧ ಪಟ್ಟ ಕಚೇರಿಗೆ ಹಿಂದಿರುಗಿಸಿ, ಎಪಿಎಲ್ ಪಡಿತರ ಚೀಟಿಯನ್ನು ಇದೇ ಫೆಬ್ರವರಿ ಅಂತ್ಯದೊಳಗೆ ಪಡೆಯಬೇಕು. ತಪ್ಪಿದ್ದಲ್ಲಿ ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಪಡಿತರ ಚೀಟಿ ಪಡೆದು ದುರ್ಲಾಭ ಪಡೆಯುತ್ತಿರುವ ಪಡಿತರ ಚೀಟಿಯನ್ನು ಅನರ್ಹಗೊಳಿಸಿ ದಂಡ ವಸೂಲಿ ಮಾಡುವುದರ ಜೊತೆಗೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಂದು ದ.ಕ. ಜಿಲ್ಲಾಧಿಕಾರಿ ರಾಜೇಂದ್ರ ಅವರು ಎಚ್ಚರಿಕೆ ನೀಡಿದ್ದಾರೆ.

ಎಲ್ಲಾ ಖಾಸಗಿ ನೌಕರರು, ಸರಕಾರಿ, ಅನುದಾನಿತ ನೌಕರರು, ನಿಗಮ, ಮಂಡಳಿಗಳು, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಇತ್ಯಾದಿ ಒಳಗೊಂಡಂತೆ ಆದಾಯ ತೆರಿಗೆ/ಸೇವಾ ತೆರಿಗೆ/ಜಿ.ಎಸ್.ಟಿ/ ವೃತ್ತಿತೆರಿಗೆ ಪಾವತಿಸುವ ಎಲ್ಲಾ ಕುಟುಂಬಗಳು, ಗ್ರಾಮೀಣ ಪ್ರದೇಶದಲ್ಲಿ 3ಹೆಕ್ಟರ್ ಒಣ ಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು ಬಿಪಿಎಲ್ ಕಾರ್ಡ್ ಹೊಂದಿರುವಂತಿಲ್ಲ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಇನ್ನು ನಗರ ಪ್ರದೇಶದಲ್ಲಿ 1000 ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆಯನ್ನು ಸ್ವಂತವಾಗಿ ಹೊಂದಿರುವ ಕುಟುಂಬಗಳು, ಜೀನನೋಪಾಯಕ್ಕಾಗಿ ಸ್ವತಃ ಓಡಿಸುವ ಒಂದು ವಾಣಿಜ್ಯ ವಾಹನವನ್ನು ಅಂದರೆ ಟ್ರಾಕ್ಟರ್, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ, ಇತ್ಯಾದಿಗಳನ್ನು ಹೊಂದಿದ ಕುಟುಂಬವನ್ನು ಹೊರತುಪಡಿಸಿ ನಾಲ್ಕು ಚಕ್ರದ ವಾಹನಗಳನ್ನು ಹೊಂದಿರುವ ಕುಟುಂಬಗಳು ಬಿಪಿಎಲ್ ಕಾರ್ಡ್ ಗೆ ಅನರ್ಹರು. ನಿವೃತ್ತ ನೌಕರರು ಹಾಗೂ ಕುಟುಂಬದ ವಾರ್ಷಿಕ ಆದಾಯವು 1.20ಲಕ್ಷಗಳಿಗಿಂತಲೂ ಹೆಚ್ಚು ಇರುವ ಕುಟುಂಬಗಳು, ಒಂದೇ ಕುಟುಂಬದಲ್ಲಿ ಒಟ್ಟಿಗೆ ವಾಸಿಸುತ್ತಿದ್ದರೂ ಒಂದಕ್ಕಿಂತ ಹೆಚ್ಚು ಪಡಿತರ ಚೀಟಿ ಪಡೆದಿರುವವರಿಗೆ ಬಿಪಿಎಲ್ ಪಡಿತರ ಚೀಟಿ ಹೊಂದಿರುವುದು ಕಾನೂನು ಬಾಹಿರ ಹಾಗೂ ದಂಡನಾರ್ಹವಾಗಿರುತ್ತದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆಯಲ್ಲಿ ತಿಳಿಸಿದೆ.