ಮಂಗಳೂರು, ಫೆ.17 (DaijiworldNrews/HR): ಸಾರ್ವಜನಿಕರ ಸುಗಮ ಹಾಗೂ ಸುರಕ್ಷತಾ ಸಂಚಾರಕ್ಕೆ ಅಗತ್ಯವಿರುವ ಎಲ್ಲಾ ರೀತಿಯ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ವಾಹನ ದಟ್ಟಣೆ ಹೆಚ್ಚಾಗಿರುವುದರ ಜೊತೆಗೆ ಸಂಚಾರ ನಿಯಮಗಳನ್ನು ಸರಿಯಾಗಿ ಪಾಲನೆ ಮಾಡದ ಹಿನ್ನೆಲೆ ಅಪಘಾತ ಪ್ರಕರಣಗಳು ಹೆಚ್ಚುತ್ತಿವೆ. ಜನರ ಸುರಕ್ಷಿತ ಸುಖಕರ ಪ್ರಯಾಣಕ್ಕೆ ಅನುಕೂಲವಾಗುವ ರೀತಿಯಲ್ಲಿ ಅಗತ್ಯವಿರುವ ಎಲ್ಲಾ ಅಭಿವೃದ್ಧಿಗಳನ್ನು ಕೈಗೊಳ್ಳುವುದರೊಂದಿಗೆ ಜನಸಾಮಾನ್ಯರು ರಸ್ತೆ ಸುರಕ್ಷತಾ ಹಾಗೂ ಸಂಚಾರ ನಿಯಮಗಳನ್ನು ಚಾಚು ತಪ್ಪದೇ ಪಾಲಿಸುವಂತೆ ನೋಡಿಕೊಳ್ಳಬೇಕು" ಎಂದು ತಿಳಿಸಿದರು.
"ಕಳೆದ ಐದು ವರ್ಷಗಳಲ್ಲಿ ಹೆಚ್ಚು ಅಪಘಾತವಾಗಿರುವ ಸ್ಥಳಗಳನ್ನು ಗುರುತಿಸುವುದರೊಂದಿಗೆ ಅಲ್ಲಿ ಅಪಘಾತಗಳು ಮರುಕಳಿಸದಂತೆ ಕಾಮಗಾರಿಗಳನ್ನು ಕೈಗೊಳ್ಳುವುದರ ಜೊತೆಗೆ ಜನಸಾಮಾನ್ಯರಿಗೆ ತಿಳಿಯುವಂತೆ ಎಚ್ಚರಿಕೆ ಫಲಕಗಳನ್ನು ಅಳವಡಿಸಬೇಕು" ಎಂದು ತಿಳಿಸಿದರು.
"ಖಾಸಗಿ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕರಿಂದ ಜಿಲ್ಲೆಯ ರಸ್ತೆಗಳಲ್ಲಿ ಅಪಘಾತವನ್ನು ತಡೆಯಲು ಸುಧಾರಣಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಮಾಹಿತಿಯನ್ನು ಕ್ರೋಢಿಕರಿಸುವುದರೊಂದಿಗೆ ಅಂತಹ ಜಾಗಗಳಲ್ಲಿ ಕೈಗೊಳ್ಳಬಹುದಾದ ಮುನ್ನೆಚ್ಚರಿಕಾ ಕ್ರಮಗಳನ್ನು ಹಾಗೂ ಸುಧಾರಣೆಗಳನ್ನು ಕೈಗೊಳ್ಳಬೇಕು" ಎಂದರು.
ಇನ್ನು "ನಗರ ಪ್ರದೇಶದ ಒಳಗೆ ಹಾಗೂ ಗ್ರಾಮೀಣ ಭಾಗಕ್ಕೆ ಸಂಚರಿಸುವ ಪ್ರತಿಯೊಂದು ಖಾಸಗಿ ಹಾಗೂ ಕೆಸ್ಆರ್ಟಿಸಿ ಬಸ್ಗಳು ನಿಗದಿಪಡಿಸಿರುವ ಸಮಯಕ್ಕೆ ಸರಿಯಾಗಿ ವಾಹನ ಚಾಲನೆಯಾಗಬೇಕು, ಈ ವಾಹನಗಳಿಗೆ ಜಿಪಿಎಸ್ ತಂತ್ರಜ್ಞಾನವನ್ನು ಅಳವಡಿಸುವುದರ ಜೊತೆಗೆ ಅದು ದಿನದ ಅವಧಿಯಲ್ಲಿ ಚಾಲನೆಯಲ್ಲಿರಬೇಕು ಎಂದ ಅವರು, ಜಿಪಿಎಸ್ ತಂತ್ರಾಂಶದ ಚಾಲನೆ ದಿನದ ಅವಧಿಯಲ್ಲಿ 2 ಗಂಟೆಗಳ ಕಾಲಕ್ಕಿಂತಲೂ ಹೆಚ್ಚು ಸಮಯ ಕಾರ್ಯರೂಪದಲ್ಲಿ ಇಲ್ಲದೇ ಇದ್ದಲ್ಲಿ ಅಂತಹ ಬಸ್ಗಳ ಸಂಚಾರವನ್ನು ನಿಲ್ಲಿಸುವಂತೆ ಅಧಿಕಾರಿಗಳು ಕ್ರಮವಹಿಸಬೇಕು" ಎಂದು ತಿಳಿಸಿದರು.
"ಇತ್ತೀಚಿಗೆ ದಿನಗಳಲ್ಲಿ ಕೊರೊನಾ ನಿಯಂತ್ರಣಕ್ಕೆ ಬಂದ ಹಿನ್ನೆಲೆ ಶಾಲಾ-ಕಾಲೇಜುಗಳು ಪುನರಾರಂಭಗೊಳ್ಳುತ್ತಿದ್ದು, ವಿದ್ಯಾರ್ಥಿಗಳ ಪ್ರಯಾಣದ ಅಗತ್ಯಕ್ಕೆ ಅನುಗುಣವಾಗಿ ಬಸ್ಗಳು ಸಂಚರಿಸುವಂತೆ ನೋಡಿಕೊಳ್ಳಬೇಕು ಎಂದ ಅವರು, ಖಾಸಗಿ ಬಸ್, ಆಟೋಗಳು ಸೇರಿದಂತೆ ಮತ್ತಿತರ ವಾಹನಗಳಲ್ಲಿ ನಿಗಧಿಪಡಿಸಿದ್ದಕ್ಕಿಂತ ಹೆಚ್ಚು ವಿದ್ಯಾರ್ಥಿಗಳನ್ನು ಕೂರಿಸಿಕೊಂಡು ವಾಹನ ಚಾಲನೆ ಮಾಡುವುದು ಕಂಡುಬಂದಲ್ಲಿ ನಿರ್ದಾಕ್ಷೀಣ್ಯವಾಗಿ ಕ್ರಮ ಕೈಗೊಳ್ಳಬೇಕು" ಎಂದರು.
"ರಸ್ತೆ ಸುರಕ್ಷತಾ ಸಮಿತಿ ಸಭೆಯು ಪ್ರತಿ ತಿಂಗಳಿಗೊಮ್ಮೆ ನಡೆಯಬೇಕು. ಸಮಿತಿಯಲ್ಲಿ ಚರ್ಚಿಸಿದ ನಿರ್ಣಯಗಳನ್ನು ಚಾಚುತಪ್ಪದೇ ಪಾಲಿಸಬೇಕು ಎಂದ ಅವರು, ಇಂದಿನ ಸಮಿತಿ ಸಭೆಗೆ ಗೈರು ಹಾಜರಾದ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ನೀಡಬೇಕು, ಮುಂದಿನ ದಿನಗಳಲ್ಲಿ ಇಂತಹವು ಪುನರಾವರ್ತಿತವಾದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಪ್ರಕರಣಗಳನ್ನು ಹಾಕಿ, ಅವರನ್ನೇ ವೈಯಕ್ತಿಕ ಜವಬ್ದಾರಿಯನ್ನಾಗಿಸಲಾಗುವುದು" ಎಂದು ಹೇಳಿದ್ದಾರೆ.
ಸಭೆಯಲ್ಲಿ ಮಹಾನಗರ ಪಾಲಿಕೆಯ ಆಯುಕ್ತ ಅಕ್ಷಯ್ ಶ್ರೀಧರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್, ಸಾರಿಗೆ ಇಲಾಖೆಯ ಪ್ರಾದೇಶಿಕ ಅಧಿಕಾರಿ ವರ್ಣೇಕರ್ ಹಾಗೂ ಮತ್ತಿತರ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.