ಮಂಗಳೂರು, ಫೆ.19 (DaijiworldNews/PY): ಲಂಚ ಸ್ವೀಕಾರ ಆರೋಪ ಸಾಬೀತಾದ ಹಿನ್ನೆಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಪ್ರಕಾಶ್ ಎಸ್ ಅವರಿಗೆ ಮೂರನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಲೋಕಾಯುಕ್ತ ವಿಶೇಷ ನ್ಯಾಯಾಲಯ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿದೆ.

ಸಾಂದರ್ಭಿಕ ಚಿತ್ರ
2011ರ ಜುಲೈ 6ರಂದು ಫಾರೂಕ್ ಎಂಬವರಿಂದ ಎಫ್ಐಆರ್ ದಾಖಲಿಸಲು 1000 ರೂ. ಲಂಚದ ಹಣಕ್ಕೆ ಬೇಡಿಕೆ ಇಟ್ಟು ಹಣ ಸ್ವೀಕರಿಸುತ್ತಿದ್ದಾಗ ಮಂಗಳೂರು ಲೋಕಾಯುಕ್ತ ನಿರೀಕ್ಷಕ ದಿಲೀಪ್ ಕುಮಾರ್ ಹಾಗೂ ಸಿಬ್ಬಂದಿ ದಾಳಿ ಮಾಡಿ ಪುತ್ತೂರು ಟೌನ್ ಪೋಲೀಸ್ ಠಾಣೆಯಲ್ಲಿ ಹೆಡ್ ಕಾನ್ಟ್ಟೇಬಲ್ ಆಗಿರುವ ಪ್ರಕಾಶ್.ಎಸ್.ಅವರನ್ನು ಬಂಧಿಸಲಾಗಿತ್ತು.
ಲಂಚ ಸ್ವೀಕಾರ ಪ್ರಕರಣದ ಬಗ್ಗೆ ವಿಚಾರಣೆ ನಡೆಸಿದ ಮಂಗಳೂರು ಲೋಕಾಯುಕ್ತ ವಿಶೇಷ ನ್ಯಾಯಾಲಯವು ವಿಶೇಷ ಸರಕಾರಿ ಅಭಿಯೋಜಕ ಕೆ.ಎಸ್.ಎನ್. ರಾಜೇಶ್ ಅವರ ವಾದವನ್ನು ಪುರಸ್ಕರಿಸಿ, ಆರೋಪಿಯ ಮೇಲಿನ ಆರೋಪ ಸಾಬೀತಾಗಿದೆ ಎಂದು ತೀರ್ಮಾನಕ್ಕೆ ಬಂದ ಹಿನ್ನಲೆ ಆರೋಪಿಗೆ ಮೂರನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಲೋಕಾಯುಕ್ತ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಬಿ. ಬಿ. ಜಕಾತಿ ಅವರು ಶಿಕ್ಷೆ ಪ್ರಕಟಿಸಿದ್ದು, ಮೂರು ವರ್ಷ ಶಿಕ್ಷೆ ಹಾಗೂ 10,000 ರೂ. ದಂಡ ವಿಧಿಸಿದ್ದಾರೆ.
ಆರೋಪಿ ದಂಡ ತೆರಲು ತಪ್ಪಿದಲ್ಲಿ 2 ತಿಂಗಳ ಸಾದಾ ಸಜೆ ಅನುಭವಿಸಬೇಕೆಂದು ನ್ಯಾಯಾಲಯ ಆದೇಶಿಸಿದೆ.
ಮಂಗಳೂರು ಲೋಕಾಯುಕ್ತ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ, ನ್ಯಾಯವಾದಿ ಕೆ.ಎಸ್.ಎನ್. ರಾಜೇಶ್ ವಾದಿಸಿದ್ದರು.