ಮಂಗಳೂರು, ಮಾ. 09 (DaijiworldNews/SM): ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಜಿಲ್ಲೆ ನಡುವಿನ ಸಂಚಾರವನ್ನು ಯಾವ ಕಾನೂನಿನಡಿ ನಿರ್ಬಂಧಿಸಿದ್ದೀರಿ ಎಂದು ಪ್ರಶ್ನಿಸುವ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.

ಅಲ್ಲದೇ ಗಡಿಯಲ್ಲಿ ಆರ್ಟಿಪಿಸಿಆರ್ ಪರೀಕ್ಷಾ ವರದಿ ಪರಿಶೀಲಿಸಿ ಸಂಚಾರಕ್ಕೆ ಅನುವು ಮಾಡಿಕೊಡಲು ಸೂಕ್ತ ಕ್ರಮ ಜರುಗಿಸುವಂತೆ ನಿರ್ದೇಶಿಸಿದೆ. ಗಡಿ ಸಂಚಾರ ನಿರ್ಬಂಧಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಫೆ.18ರಂದು ಹೊರಡಿಸಿರುವ ಆದೇಶ ಪ್ರಶ್ನಿಸಿ ಕಾಸರಗೋಡಿನ ವಕೀಲ ಬಿ. ಸುಬ್ಬಯ್ಯ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ೯ ಸಲ್ಲಿಸಿದ್ದರು.
ಈ ಅರ್ಜಿಯನ್ನು ಇಂದು ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಸರ್ಕಾರದ ಪರ ವಕೀಲರು ಪೀಠಕ್ಕೆ ಮಾಹಿತಿ ನೀಡಿ, ಗಡಿ ಸಂಚಾರಕ್ಕೆ ಸಂಬಂಧಿಸಿದಂತೆ ಹೊರಡಿಸಿರುವ ಆದೇಶದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ ಎಂದು ತಿಳಿಸಿದರು.
ಇದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಪೀಠ, ಯಾವ ಕಾನೂನಿನ ಅಡಿಯಲ್ಲಿ ಇಂತಹ ನಿರ್ಬಂಧ ವಿಧಿಸಿದ್ದೀರಿ. ನಿಮ್ಮ ನಿರ್ಬಂಧ ಕೇಂದ್ರದ ಕೋವಿಡ್ ಮಾರ್ಗಸೂಚಿಗಳಿಗೆ ವಿರುದ್ಧವಾಗಿದೆ ಎಂದು ಬೇಸರ ವ್ಯಕ್ತಪಡಿಸಿತು.