ಬಂಟ್ವಾಳ, ಆ 14 : ನೇತ್ರಾವತಿ ನದಿ ತಟದಲ್ಲಿರುವ ನೆರೆ ನಿರಾಶ್ರಿತರಿಗೆ ಹಾಗೂ ಅಪಾಯದಲ್ಲಿರುವ ಕುಟುಂಬಗಳಿಗೆ ಪಾಣೆಮಂಗಳೂರಿನ ಶಾರದಾ ಶಾಲೆಯಲ್ಲಿ ಗಂಜಿಕೇಂದ್ರ ತೆರೆಯುವಂತೆ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮಂಗಳವಾರ ಮಧ್ಯಾಹ್ನ ಬಂಟ್ವಾಳ ತಾಲೂಕು ವ್ಯಾಪ್ತಿಯ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಯವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕಂಚಿಕಾರ ಪೇಟೆ, ಆಲಡ್ಕ, ಮಿಲಿಟರಿ ಗ್ರೌಂಡ್ ನ ಪ್ರದೇಶಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಯವರು ಮುಳುಗಡೆಯಾಗಿರುವ ಮನೆಗಳ ವಿವರ ಪಡೆದ ಅವರು, ನೆರೆ ಭೀತಿ ಇರುವ ಮನೆಗಳನ್ನು ತಕ್ಷಣ ಖಾಲಿ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದೇ ವೇಳೆ ಸ್ಥಳೀಯರ ಜೊತೆ ಮಾತನಾಡಿದ ಜಿಲ್ಲಾಧಿಕಾರಿಯವರು, ಮುಂದಿನ ಎರಡು ಮೂರು ದಿನಗಳ ಕಾಲ ಮಳೆ ತೀವ್ರಗೊಳ್ಳುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಮನೆಗಳನ್ನು ತೆರವು ಗೊಳಿಸಿ, ಸಂಬಂಧಿಕರ ಮನೆಗಳಲ್ಲಿ ಆಶ್ರಯ ಪಡೆಯಿರಿ, ಅವಶ್ಯಕತೆ ಇದ್ದರೆ, ಜಿಲ್ಲಾಡಳಿತ ತೆರೆದಿರುವ ಗಂಜಿ ಕೇಂದ್ರದಲ್ಲಿ ಆಶ್ರಯ ಪಡೆಯಿರಿ ಹಾಗೂ ಪ್ರಾಕೃತಿಕ ವಿಕೋಪದಿಂದ ಆಗುವ ಹಾನಿಯನ್ನು ತಪ್ಪಿಸಲು ಅಧಿಕಾರಿಗಳ ಜೊತೆ ಸಹಕಾರ ನೀಡುವಂತೆ ಅವರು ಮನವಿ ಮಾಡಿದರು. ಈ ಭಾಗದ ಜನರು ನೆರೆಯ ಬಗ್ಗೆ ಆತಂಕ ಪಡಬೇಕಾದ ಅವಶ್ಯಕತೆ ಇಲ್ಲ. ಜಿಲ್ಲಾಡಳಿತ ಸಕಲ ಸಿದ್ಧತೆ ನಡೆಸಿದ್ದು, ಸೂಕ್ತ ವ್ಯವಸ್ಥೆ ಮಾಡಲಾಗುವುದು ಎಂದರು.
ಸರಳ ಸ್ವಾತಂತ್ರ್ಯ ದಿನಾಚರಣೆ
ಇದೇ ಸಂದರ್ಭ ಮಾಧ್ಯಮದೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿಯವರು, ಮಳೆಯ ಅಬ್ಬರ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಬುಧವಾರ ಸ್ವಾತಂತ್ರ್ಯ ದಿನಾಚರಣೆಯನ್ನು ಶಾಲೆಗಳಲ್ಲಿ ಸಾಂಕೇತಿಕವಾಗಿ ನಡೆಸುವಂತೆ ಸೂಚಿಸಲಾಗಿದೆ. ಮಕ್ಕಳ ಕಡ್ಡಾಯ ಹಾಜರಾತಿ ಬೇಕಿಲ್ಲ ಎಂದ ಅವರು, ಮಳೆಯಿಂದಾಗುವ ಹಾನಿಯನ್ನು ತಪ್ಪಿಸಲು ಪ್ರತಿಯೊಬ್ಬರೂ ಜಿಲ್ಲಾಡಳಿತದ ಜೊತೆ ಸಹಕಾರ ನೀಡಬೇಕು ಎಂದರು. ೧೮ ಮನೆಗಳ ಸ್ಥಳಾಂತರ ನಡೆದಿದೆ, ಅಪಾಯದ ಸ್ಥಿತಿಯಲ್ಲಿರುವ ಸುಮಾರು 30 ರಿಂದ 40 ಮನೆಗಳನ್ನು ಸ್ಥಳಾಂತರಿಸುವಂತೆ ತಹಶೀಲ್ದಾರರಿಗೆ ಸೂಚಿಸಲಾಗಿದೆ. ಗಂಜಿ ಕೇಂದ್ರವನ್ನು ತೆರೆಯಲಾಗಿದ್ದು, ಅಗತ್ಯವುಳ್ಳವರಿಗೆ ಆಶ್ರಯ ನೀಡಲಾಗುವುದು ಎಂದರು.
ಈ ಸಂದರ್ಭದಲ್ಲಿ ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ, ಮುಖ್ಯಾಧಿಕಾರಿ ರೇಖಾ ಜೆ.ಶೆಟ್ಟಿ, ತಾಲ್ಲೂಕು ಪ್ರಥಮ ದರ್ಜೆ ಸಹಾಯಕ ರಾಜ್ ಕುಮಾರ್, ಉಪತಹಶೀಲ್ದಾರ್ ರಾಜೇಶ್ ನಾಯ್ಕ್ , ಪಾಣೆಮಂಗಳೂರು ಹೋಬಳಿ, ಕಂದಾಯ ನಿರೀಕ್ಷಕ ರಾಮ ಕಾಟಿ ಪಳ್ಳ , ಆಡಳಿತ ಶಾಖೆಯ ಸೀತಾರಾಮ ಕಮ್ಮಾಜೆ , ಪ್ರಕೃತಿ ವಿಕೋಪ ಅಧಿಕಾರಿ ವಿಷು ಕುಮಾರ್ ಸಿಬಂದಿ ಸದಾಶಿವ ಕೈಕಂಬ. ಶೀತಲ್, ಲಕ್ಷ್ಮಣ್ ಸುಂದರ, ಸಿಬಂದಿ ಯಶೋದ, ಬಂಟ್ವಾಳ ನಗರ ಠಾಣಾ ಸಿಬ್ಬಂದಿ, ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಈ ಸಂದರ್ಭ ಹಾಜರಿದ್ದರು.