ಬಂಟ್ವಾಳ, ಆ.17: ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಬಂಟ್ವಾಳ ತಾಲೂಕಿನ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಜನರು ಭಯ ಭೀತರಾಗುವ ಅಗತ್ಯವಿಲ್ಲ. ಯಾವುದೇ ಸಹಾಯ ಬೇಕಿದ್ದಲ್ಲಿ ಜಿಲ್ಲಾಡಳಿತ ಹಾಗೂ ನಮ್ಮನ್ನು ನೇರವಾಗಿ ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ.
ಈಗಾಗಲೇ ಜಿಲ್ಲಾಡಳಿತ ನೆರೆ ಪೀಡಿತ ಪ್ರದೇಶಗಳ ಜನರಿಗೆ ತಾತ್ಕಾಲಿಕ ಬದಲಿ ವ್ಯವಸ್ಥೆ ಕಲ್ಪಿಸಿದ್ದಾರೆ. ಇಲ್ಲಿನ ಜನರಿಗೆ ಯಾವುದೇ ತೊಂದರೆಯಾಗದಂತೆ ತುರ್ತು ಹಾಗೂ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದ್ದೇನೆ. ಮಳೆ ಕ್ಷೀಣಿಸಿದ ನಂತರವೇ ನೆರೆ ಪೀಡಿತ ಸಂತ್ರಸ್ತರಿಗೆ ಪರಿಹಾರ ನೀಡುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಜಿಲ್ಲೆಯ ಹಲವು ಕಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜಲಾವೃತವಾಗಿದೆ. ಅಪಾಯದ ಮಟ್ಟ ಮೀರಿ ನೇತ್ರಾವತಿ ನದಿ ಹರಿಯುತ್ತಿದ್ದು, ನೀರಿನ ಮಟ್ಟ 9 ಮೀಟರ್ ದಾಖಲಿಸಲಾಗಿದೆ. ಪರಿಣಾಮ, ಬಂಟ್ವಾಳದ ಹಲವು ಪ್ರದೇಶಗಳು ಮುಳುಗಡೆ ಆಗುವ ಭೀತಿ ಎದುರಿಸುತ್ತಿದೆ. ನೇತ್ರಾವತಿ ನದಿ ತಟದ ಗ್ರಾಮಗಳು ಜಲಾವೃತಗೊಂಡಿದ್ದು, ಸಂತ್ರಸ್ತರನ್ನು ಸುರಕ್ಷಿತ ಪ್ರದೇಶಗಳಿಗೆ ರವಾನಿಸಲಾಗಿದೆ.
ಮುಂದಿನ 24 ಗಂಟೆಯಲ್ಲಿ ಕರಾವಳಿಯ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆಯಿಂದ ಹೈ ಅಲರ್ಟ್ ಘೋಷಿಸಲಾಗಿದೆ.