ಉಡುಪಿ, ಮಾ.16 (DaijiworldNews/HR): ಯಾವುದೇ ರೀತಿಯ ತಾರತಮ್ಯವಿಲ್ಲದೇ ಮಕ್ಕಳನ್ನು ರಕ್ಷಿಸುವ ಮತ್ತು ಮಕ್ಕಳ ಹಕ್ಕುಗಳನ್ನು ರಕ್ಷಿಸುವುದು ಸಂಬಂಧಪಟ್ಟ ಎಲ್ಲಾ ಇಲಾಖೆಗಳ ಜವಾಬ್ದಾರಿಯಾಗಿದ್ದು, ಈ ಕುರಿತಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಕಾಯಿದೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಡಾ.ಅಂತೋಣಿ ಸೆಬಾಸ್ಟಿಯನ್ ಹೇಳಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ, ಜಿಲ್ಲೆಯ ಪೋಕ್ಸೋ, ಆರ್,ಟಿ.ಐ ಹಾಗೂ ಬಾಲನ್ಯಾಯ ಕಾಯ್ದೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, "ರಾಜ್ಯ ಮಕ್ಕಳ ರಕ್ಷಣಾ ಆಯೋಗವು ಮಕ್ಕಳ ರಕ್ಷಣೆಗೆ ಬದ್ದವಾಗಿದ್ದು, ಅವುಗಳ ಉಲ್ಲಂಘನೆಯಾದಲ್ಲಿ ನೇರವಾಗಿ ರಾಜ್ಯ ಹೈಕೋರ್ಟ್ಗೆ ಮಾಹಿತಿ ನೀಡಬೇಕಾಗಿರುವುದರಿಂದ, ಸಂಬAಧಪಟ್ಟ ಎಲ್ಲಾ ಇಲಾಖೆಗಳು ತಮ್ಮ ವ್ಯಾಪ್ತಿಯಲ್ಲಿ ತಮಗೆ ನಿಗಧಿಪಡಿಸಿರುವ ಕರ್ತವ್ಯಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ, ಕಾಯಿದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿ, ಮಕ್ಕಳ ಹಕ್ಕುಗಳನ್ನು ರಕ್ಷಿಸಬೇಕು ಎಂದು ಅಧ್ಯಕ್ಷರು ಹೇಳಿದರು.
ಉಡುಪಿ ಜಿಲ್ಲೆಯಲ್ಲಿನ ಬಾಲ ಕಾರ್ಮಿಕರ ಕುರಿತ ಸಮೀಕ್ಷೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಕಾರ್ಮಿಕ ಇಲಾಖೆಗೆ ಸೂಚಿಸಿದ ಅಧ್ಯಕ್ಷರು, ಶಾಲೆಗಳಲ್ಲಿ ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗದಂತೆ ಎಲ್ಲಾ ಮುನ್ನೆಚ್ಚರಿಕೆ ಕೈಗೊಂಡು, ಮಕ್ಕಳಿಗೆ ಶೌಚಾಲಯ, ಪುಸ್ತಕ, ಸಮವಸ್ತ್ರ ಸೇರಿದಂತೆ ಸರ್ಕಾರದಿಂದ ನೀಡುವ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಿ, ಶಾಲೆಗಳಲ್ಲಿ ದೂರು ಪೆಟ್ಟಿಗೆ ಅಳವಡಿಸಿ, ಶಾಲೆ ಬಿಟ್ಟ ಮಕ್ಕಳ ಬಗ್ಗೆ ಮಾಹಿತಿ ಸಂಗ್ರಹಿಸಿ, ಅವರು ಪುನ: ಶಾಲೆಗೆ ಮರಳುವಂತೆ ಮಾಡಿ, ಶಾಲೆಗಳಲ್ಲಿ ಚೈಲ್ಡ್ಲೈನ್ ಸಂಖ್ಯೆಯನ್ನು ಕಡ್ಡಾಯವಾಗಿ ಅಳವಡಿಸಿ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಗ್ರಾಮ ಪಂಚಾಯತ್ಗಳಲ್ಲಿ ಮಕ್ಕಳ ಗ್ರಾಮಸಭೆ ನಡೆಸಿರುವ ಕುರಿತು ಪರಿಶೀಲಿಸಿದ ಅಯೋಗದ ಸದಸ್ಯರು, ಮಕ್ಕಳ ಗ್ರಾಮಸಭೆಯಲ್ಲಿ ಸಲ್ಲಿಕೆಯಾಗುವ ದೂರುಗಳ ಕುರಿತು ಶೀಘ್ರದಲ್ಲಿ ಕ್ರಮ ಕೈಗೊಳ್ಳುವಂತೆ ಎಲ್ಲಾ ಕಾರ್ಯ ನಿರ್ವಾಹಕ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಾಲನ್ಯಾಯ ಕಾಯ್ದೆಯಡಿ ನೊಂದಣಿಯಾಗಿರುವ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯ ಇರುವ ಬಗ್ಗೆ ಮತ್ತು ಮಕ್ಕಳ ಸುರಕ್ಷತೆಗೆ ಅಳವಡಿಸಿರುವ ಸುರಕ್ಷತಾ ಕ್ರಮಗಳ ಕುರಿತು ಪರಿಶೀಲಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದ ಅಧ್ಯಕ್ಷರು, ಮಕ್ಕಳ ಹಕ್ಕುಗಳ ರಕ್ಷಣೆ ಕುರಿತಂತೆ ನಿಯಮಿತವಾಗಿ ಸಭೆಗಳನ್ನು ನಡೆಸಿ, ಸಭೆಯ ವರದಿ ಮತ್ತು ನಿರ್ಣಯಗಳ ಕುರಿತು ಕೈಗೊಂಡ ಕ್ರಮಗಳ ಬಗ್ಗೆ ಸಮಗ್ರ ವರದಿಯನ್ನು ಆಯೋಗಕ್ಕೆ ಸಲ್ಲಿಸಬೇಕು ಹಾಗೂ ಮಕ್ಕಳ ರಕ್ಷಣೆ ಕುರಿತು ಕಾರ್ಯನಿರ್ವಹಿಸುವ ಎಲ್ಲಾ ಅನುಷ್ಠಾನ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಯಾವುದೇ ಗೊಂದಲಕ್ಕೆ ಆಸ್ಪದ ನೀಡದಂತೆ ಸಮರ್ಪಕವಾದ ಅಂಕಿ-ಅಂಶಗಳನ್ನು ಆಯೋಗಕ್ಕೆ ನೀಡುವಂತೆ ಅಧ್ಯಕ್ಷರು ಸೂಚಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕಾವೇರಿ, ರಾಜ್ಯ ಮಕ್ಕಳ ಆಯೋಗದ ಸದಸ್ಯ ಶಂಕರಪ್ಪ, ರಾಘವೇಂದ್ರ, ಪರಶುರಾಮ, ಭಾರತಿ, ಅಶೋಕ್ ಹಾಗೂ ಹಾಗೂ ವಿವಿಧ ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಮಕ್ಕಳ ಹಕ್ಕು ರಕ್ಷಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಸ್ವಯಂ ಸೇವಾ ಸಂಘಟನೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.