ಮಂಗಳೂರು, ಮಾ.19 (DaijiworldNews/PY): "ಕೊರೊನಾ ಸಾಂಕ್ರಾಮಿಕ ರೋಗವು ನಾಗರಿಕ ಸಮಾಜವನ್ನು ತಲ್ಲಣಗೊಳಿಸಿದ್ದು, ಇದರ ನಿಯಂತ್ರಣಕ್ಕಾಗಿ ಸರ್ಕಾರವು ನೀಡಿರುವ ಮುಂಜಾಗೃತ ಕ್ರಮಗಳನ್ನು ಅನುಸರಿಸುವುದರೊಂದಿಗೆ, ಜಿಲ್ಲೆಯ ಎಲ್ಲಾ ಮಸೀದಿಗಳಲ್ಲಿ ಕೊರೊನಾ ಲಸಿಕೆ ಪಡೆಯುವ ಬಗ್ಗೆ ಜನಜಾಗೃತಿಯನ್ನು ಮೂಡಿಸಲಾಗುವುದು" ಎಂದು ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಹಾಜಿಯು ಕೆ. ಮೋನು ಕನಚೂರು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾಂದರ್ಭಿಕ ಚಿತ್ರ
"ಸರ್ಕಾರದ ಮಾರ್ಗಸೂಚಿಯ ಪ್ರಕಾರ 3ನೇ ಹಂತದ ಲಸಿಕಾಕರಣದಲ್ಲಿ 45 ರಿಂದ 59 ವಯಸ್ಸಿನ ಕೋಮೊರ್ಬಿಡ್ ಕಂಡಿಷನ್ ಹೊಂದಿರುವ ಜನರಿಗೆ ಹಾಗೂ 60 ವರ್ಷ ಮೇಲ್ಪಟ್ಟ ಎಲ್ಲಾ ಹಿರಿಯ ನಾಗರಿಕರಿಗೆ ಈಗಾಗಲೇ ಕೊರೊನಾ ಲಸಿಕೆಯನ್ನು ನೀಡುವ ಕಾರ್ಯಕ್ರಮ ಅನುಷ್ಠಾನಗೊಂಡಿದೆ" ಎಂದಿದ್ದಾರೆ.
"ಕೊರೊನಾ ಲಸಿಕೆಯ ಬಗ್ಗೆ ಜನಸಾಮಾನ್ಯರಲ್ಲಿ ಇರುವ ಭಯ, ತಪ್ಪು ಕಲ್ಪನೆಯನ್ನು ಹೋಗಲಾಡಿಸಿ, ಫಲಾನುಭವಿಗಳು ಲಸಿಕೆಯನ್ನು ಪಡೆಯುವಂತೆ ಜಿಲ್ಲಾ ಆರೋಗ್ಯ ಕಲ್ಯಾಣ ಅಧಿಕಾರಿಗಳು ತಿಳಿಸಿದ್ದಾರೆ. ಆ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಮಸೀದಿಗಳಲ್ಲಿ ಜುಮ್ಮಾ ನಮಾಝಿನ ನಂತರ ಕೊರೊನಾ ಲಸಿಕೆ ಪಡೆಯುವ ಬಗ್ಗೆ ಪ್ರಚುರಪಡಿಸಬೇಕು" ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.