ನವದೆಹಲಿ, ಆ31(SS): ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ರಾಜ್ಯದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಭೇಟಿ ಮಾಡಿದ್ದು, ಭೀಕರ ಜಲ ಪ್ರವಾಹದಿಂದ ತತ್ತರಿಸಿದ ಕೊಡಗಿನ ಪ್ರವಾಹಕ್ಕೆ ನೆರವು ನೀಡುವಂತೆ ಮತ್ತೊಮ್ಮೆ ಮನವಿ ಸಲ್ಲಿಸಿದ್ದಾರೆ.
ಮಹಾಮಳೆಯಿಂದ ಕೊಡಗಿನ ಚಿತ್ರಣವೇ ಸಂಪೂರ್ಣ ಬದಲಾಗಿದೆ. ವೀರರ ನಾಡು ಕೊಡಗಿನ ನೆರೆ ಅರಗಿಸಿಕೊಳ್ಳಲಾಗದ ವಾಸ್ತವ. ಈ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಪ್ರಧಾನಮಂತ್ರಿ ಕಚೇರಿಯಲ್ಲಿ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರನ್ನು ಕೂಡ ಭೇಟಿ ಮಾಡಿದ್ದು, ಕೊಡಗು ಪ್ರವಾಹ ಪರಿಸ್ಥಿತಿಯ ಬಗ್ಗೆ ವಿವರಣೆ ನೀಡಿದ್ದಾರೆ.
ಸಿಎಂ ಕುಮಾರಸ್ವಾಮಿ ಅವರಿಗೆ ಉಪ ಮುಖ್ಯಮಂತ್ರಿ ಜಿ ಪರಮೇಶ್ವರ, ಸಚಿವರಾದ ಬಂಡೆಪ್ಪ ಕಾಶೆಂಪೂರ್ ಹಾಗೂ ಆರ್ ವಿ ದೇಶಪಾಂಡೆ ಅವರು ಸಾಥ್ ನೀಡಿದರು.
ಆಗಸ್ಟ್ 24ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದ ಸಿಎಂ ಕುಮಾರಸ್ವಾಮಿ ಅವರು, ಕೊಡಗು ಪ್ರವಾಹ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಲು 2 ಸಾವಿರ ಕೋಟಿ ರೂ. ನೆರವು ನೀಡುವಂತೆ ಮನವಿ ಮಾಡಿದ್ದರು. ಈ ಪತ್ರದಲ್ಲಿ, ಪ್ರವಾಹದಿಂದಾಗಿ ಕನಿಷ್ಠ 17 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಜೊತೆಗೆ, 2,200 ಮನೆಗಳಿಗೆ ಹಾನಿಯಾಗಿದೆ ಎಂದು ಸಿಎಂ ಪತ್ರದಲ್ಲಿ ವಿವರಿಸಿದ್ದರು.
ಇದೀಗ ಮತ್ತೆ ರಾಜ್ಯದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ ಪರಿಹಾರ ನೀಡುವಂತೆ ಕೇಂದ್ರಕ್ಕೆ ಮನವಿ ಸಲ್ಲಿಸಿದ್ದಾರೆ.