ಬೆಂಗಳೂರು, ಸೆ 1(SM): ಸೆಪ್ಟೆಂಬರ್ ಮೂರನೇ ವಾರ ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆಗೊಳ್ಳಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸಮನ್ವಯ ಸಮಿತಿ ಸಭೆಯ ನಂತರ ಸುದ್ದಿಗಾರರ ಜತೆ ಮಾತನಾಡಿ, ಸಚಿವ ಸಂಪುಟ ವಿಸ್ತರಣೆ ಹಾಗೂ ನಿಗಮ ಮಂಡಳಿ ಅಧ್ಯಕ್ಷ, ಉಪಾಧ್ಯಕ್ಷರ ನೇಮಕ ಕೂಡ ಆಗಲಿದೆ. ಮತ್ತಷ್ಟು ವಿಳಂಬ ಆಗದು. ಆಕಾಂಕ್ಷಿಗಳ ಒತ್ತಡ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಆದ್ಯತೆಯ ಮೇರೆಗೆ ಆಯ್ಕೆ ಮಾಡಲು ಸಭೆಯಲ್ಲಿ ನಿರ್ಧರಿಸಿದ್ದೆವೆ ಎಂದರು. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾದ ಕಡೆ ಜೆಡಿಎಸ್ ಜೊತೆ ಕಾಂಗ್ರೆಸ್ ಕೈಜೋಡಿಸಲು ನಿರ್ಧರಿಸಿದೆ ಎಂದರು.
ಬಿಜೆಪಿ ಪಕ್ಷವನ್ನು ಅಧಿಕಾರದಿಂದ ದೂರವಿಡಲು ಈ ನಿರ್ಧಾರ ಕೈಗೊಂಡಿದ್ದೇವೆ. ಇದು ಕೂಡ ಸಮನ್ವಯ ಸಮಿತಿಯಲ್ಲಿ ಕೈಗೊಂಡ ಪ್ರಮುಖ ನಿರ್ಧಾರವಾಗಿದೆ. ಅತಂತ್ರ ಸ್ಥಿತಿ ನಿರ್ಮಾಣವಾದ ಕಡೆ ನಾವು ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರಿಗೆ ಮನವರಿಕೆ ಮಾಡಲಿದ್ದು, ಒಟ್ಟಾಗಿ ಅಧಿಕಾರದ ಚುಕ್ಕಾಣಿ ಹಿಡಿಯಲು ಅವಕಾಶ ಮಾಡಿಕೊಡಲಿದ್ದೇವೆ ಎಂದರು.
ಇನ್ನು ಸಮ್ಮಿಶ್ರ ಸರ್ಕಾರ ಐದು ವರ್ಷ ಸುಭದ್ರವಾಗಿ ಆಡಳಿತ ನೀಡಲಿದ್ದು, ಕುಮಾರಸ್ವಾಮಿ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ. ಈ ವಿಚಾರದಲ್ಲಿ ಯಾವುದೇ ಗೊಂದಲಗಳಿಲ್ಲ. ನಾನು ಮುಖ್ಯಮಂತ್ರಿ ಆಕಾಂಕ್ಷಿ ಎಂದು ಹೇಳಿದ ಮಾತನ್ನು ತಪ್ಪಾಗಿ ಅರ್ಥೈಸಲಾಗಿದೆ. ಅನಗತ್ಯವಾಗಿ ಈ ವಿಚಾರವನ್ನು ಮಾಧ್ಯಮಗಳು ತಪ್ಪಾಗಿ ಬಿಂಬಿಸಿವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದರು