ಮೈಸೂರು, ಸೆ 3(SM): ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದೆ. ಆದರೆ ಮೈಸೂರು ಮಹಾನಗರ ಪಾಲಿಕೆಯ ಫಲಿತಾಂಶ ಹೊರ ಬೀಳುತ್ತಿದ್ದಂತೆ, ನಗರದಲ್ಲಿ ಮಾರಾಮಾರಿ ನಡೆದಿದೆ. ಕಾಂಗ್ರೆಸ್ ವಿರುದ್ಧ ಕೆಲಸ ಮಾಡಿದ್ದಾನೆಂದು ಆರೋಪಿಸಿ ಎಸ್ಡಿಪಿಐ ಕಾರ್ಯಕರ್ತನ ಮೇಲೆ ಕೈ ಕಾರ್ಯಕರ್ತರು ಚಾಕುವಿನಿಂದ ಇರಿದು ಹಲ್ಲೆ ಮಾಡಿದ್ದಾರೆ.
ಮೈಸೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಜಯಭೇರಿಗಳಿಸಿದ ಕಾಂಗ್ರೆಸ್ ನೂತನ ಸದಸ್ಯರೊಬ್ಬರ ಬೆಂಬಲಿಗರು ಎಸ್ ಡಿಪಿಐ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಮೈಸೂರಿನ ಶಾಂತಿನಗರದ ರಮ್ಜಾ ಮಸೀದಿ ಬಳಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಕಾಂಗ್ರೆಸ್ ನ ನಾಲ್ಕು ಮಂದಿ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ದೂರಲಾಗಿದೆ. ತನ್ನ ವಿರುದ್ಧ ಮತ ಚಲಾಯಿಸಿದ್ದಾರೆ ಎಂದು ಆರೋಪಿಸಿ ಹಲ್ಲೆ ಮಾಡಲಾಗಿದೆ ಎಂಬ ಮಾಹಿತಿ ಬಹಿರಂಗಗೊಂಡಿದೆ. ಇನ್ನು ಹಲ್ಲೆಯಿಂದ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೈಸೂರಿನ ಉದಯಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.