ಬೆಂಗಳೂರು, ಸೆ 3(SM): ಕಳೆದ ವಿಧಾನಸಭೆಯ ಚುನಾವಣೆ ಬಳಿಕ ಕಾಂಗ್ರೆಸ್ ಪಕ್ಷ ದುರ್ಬಲವಾಗಿದೆ ಎಂಬ ಟೀಕೆಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಾರಿಯ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶದ ಮೂಲಕ ಜನರು ಉತ್ತರ ನೀಡಿದ್ದಾರೆ. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿಗಿಂತ ಕಾಂಗ್ರೆಸ್ ನಂಬರ್ ವನ್ ಆಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಸೋಮವಾರ ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶ ಹೊರಬಿದ್ದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆ ಗೆಲುವು ಕಾಂಗ್ರೆಸ್ ಗೆ ದೊಡ್ಡ ಶಕ್ತಿ ತಂದುಕೊಟ್ಟಿದೆ. ನಗರ, ಗ್ರಾಮೀಣ ಪ್ರದೇಶದ ಜನ ಕಾಂಗ್ರೆಸ್ ಮೇಲೆ ವಿಶ್ವಾಸ ಇರಿಸಿದ್ದಾರೆ. ಇದು ಮುಂದಿನ ಲೋಕಸಭಾ ಚುನಾವಣೆಯ ಹಾದಿಯನ್ನು ಸುಗಮಗೊಳಿಸಲಿದೆ ಎಂದು ತಿಳಿಸಿದ್ದಾರೆ. 2,664 ವಾರ್ಡ್ ಗಳಲ್ಲಿ 982 ವಾರ್ಡ್ ಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಸ್ವಂತ ಬಲದಲ್ಲಿ 35 ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮೇಲುಗೈ ಸಾಧಿಸಿದ್ದೇವೆ. ಅತಂತ್ರ ಫಲಿತಾಂಶ ಬಂದ ಕಡೆಗಳಲ್ಲಿ ಮೈತ್ರಿ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿಯೋದಾಗಿ ತಿಳಿಸಿದ್ದಾರೆ. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಜೆಡಿಎಸ್ ಕೂಡಾ ಹಲವೆಡೆ ಮೇಲುಗೈ ಸಾಧಿಸಿದೆ ಎಂದು ಅವರು ತಿಳಿಸಿದ್ದಾರೆ.