ಮಂಗಳೂರು, ಎ.02 (DaijiworldNews/PY): "ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡಿದ್ದಕ್ಕಾಗಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ದ ರಾಜ್ಯಪಾಲರಿಗೆ ಪತ್ರ ಬರೆದ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ದಿನಗಳಲ್ಲಿ ಸಮಸ್ಯೆಯನ್ನು ಬಗೆಹರಿಸಲಾಗುವುದು" ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದರು.


ಎ.2ರ ಶುಕ್ರವಾರದಂದು ನಗರದ ಓಷಿಯನ್ ಪರ್ಲ್ನಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, "ಈ ವಿಚಾರದ ಬಗ್ಗೆ ಈಶ್ವರಪ್ಪ ಅವರೊಂದಿಗೆ ಚರ್ಚೆ ನಡೆಸಲಾಗುವುದು. ಈ ಸಮಸ್ಯೆಯನ್ನು ಎರಡು ದಿನಗಳಲ್ಲಿ ಪರಿಹರಿಸಲಾಗುವುದು. ಈಶ್ವರಪ್ಪ ಅವರನ್ನು ಭೇಟಿಯಾಗಿ ನಾನು ಈ ಭಿನ್ನಾಭಿಪ್ರಾಯಗಳನ್ನು ಪರಿಹರಿಸುತ್ತೇನೆ" ಎಂದು ಹೇಳಿದರು.
"ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದ ಸಂದರ್ಭ ರಾಹುಲ್ ಗಾಂಧಿ ಅವರು ತಮ್ಮದೇ ಸರ್ಕಾರದ ಸುಗ್ರೀವಾಜ್ಞೆಯ ಪ್ರತಿಯನ್ನು ಹರಿದು ಹಾಕಿದ್ದಕ್ಕಿಂತ ದೊಡ್ಡ ಅವಮಾನ ಇದಲ್ಲ ಎನ್ನುವುದನ್ನು ತಿಳಿದುಕೊಳ್ಳಬೇಕು" ಎಂದರು.
ಉಪಚುನಾವಣೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, "ಮುಂಬರುವ ಉಪಚುನಾವಣೆಯಲ್ಲಿ ಬಿಜೆಪಿ ಮೂರು ಕ್ಷೇತ್ರಗಳಾದ ಬೆಳಗಾಂ, ಮಸ್ಕಿ ಹಾಗೂ ಬಸವಕಲ್ಯಾಣದಲ್ಲಿ ಜಯ ಗಳಿಸಲಿದೆ" ಎಂದು ವಿಶ್ವಾಸ ವ್ಯಕ್ತಪಡಿಸಿದರು.
"ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ದ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈಗಾಗಲೇ ಯತ್ನಾಳ್ ಅವರಿಗೆ ನೋಟಿಸ್ ನೀಡಲಾಗಿದ್ದು, ಅವರು ಉತ್ತರ ನೀಡಿರುತ್ತಾರೆ" ಎಂದರು.
ಸಿಡಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, "ಈ ವಿಚಾರ ತನಿಖೆಯಲ್ಲಿದೆ. ಹಾಗಾಗಿ ನಾನು ಈ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ. ಅಧಿಕಾರಿಗಳ ತನಿಖಾ ವರದಿಯ ಸತ್ಯಾಗಿರುತ್ತದೆ" ಎಂದು ತಿಳಿಸಿದರು.