ಬೆಂಗಳೂರು, ಸೆ 13(SM): ಈ ಬಾರಿ ನಾಡಿನಲ್ಲಿ ಗಣೇಶ ಚತುರ್ಥಿ ಹಾಗೂ ಮೊಹರಂ ಹಬ್ಬ ಜೊತೆ ಜೊತೆಯಾಗಿಯೇ ಬಂದಿದೆ. ಎರಡು ಸಮುದಾಯದವರು ತಮ್ಮ ಧಾರ್ಮಿಕ ಆಚರಣೆಯಲ್ಲಿ ನಿರತರಾಗಿದ್ದಾರೆ. ಎಲ್ಲೆಡೆ ಹಬ್ಬದ ವಾತಾವರಣ ಮನೆ ಮಾಡಿದೆ. ಎರಡು ಧರ್ಮದ ಹಬ್ಬಗಳು ಜೊತೆಯಲ್ಲೇ ಆಚರಿಸುವ ಸಂದರ್ಭ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಎಚ್ಚರಿಕೆ ವಹಿಸಿದ್ದಾರೆ. ಅಹಿತಕರ ಘಟನೆ ನಡೆದರೆ ಆಯಾ ವಲಯ ಡಿಸಿಪಿ ಹಾಗೂ ಎಸಿಪಿಗಳನ್ನೇ ನೇರ ಹೊಣೆ ಮಾಡಲಾಗುವುದು ಎಂದು ಗೃಹ ಸಚಿವ ಹಾಗೂ ಡಿಸಿಎಂ ಡಾ.ಜಿ. ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಗಣೇಶ ಹಬ್ಬಕ್ಕೆ ಈಗಾಗಲೇ ಪೊಲೀಸ್ ಇಲಾಖೆ ಕಾನೂನು ಸುವ್ಯವಸ್ಥೆ ಕಾಪಾಡಲು ಎಲ್ಲ ರೀತಿಯ ಸಿದ್ಧತೆ ಕೈಗೊಳ್ಳಲಾಗಿದೆ. ಗಣಪತಿ ಮೂರ್ತಿ ಪ್ರತಿಷ್ಠಾಪನೆಯಿಂದ ಆರಂಭಿಸಿ ವಿಸರ್ಜನೆ ತನಕ ಯಾವುದೇ ಅಹಿತಕರ ಘಟನೆಗಳು ನಡೆಯಬಾರದು. ಗಣಪತಿ ಪ್ರತಿಷ್ಠಾಪನೆ ಸ್ಥಳದಲ್ಲಿ ಹೆಚ್ಚುವರಿ ಪೊಲೀಸರ ನಿಯೋಜನೆ ಮಾಡಬೇಕು. ಅಲ್ಲದೆ ಮುನ್ನೆಚ್ಚರಿಕೆ ಕ್ರಮವನ್ನು ಕೈಗೊಳ್ಳಬೇಕು ಎಂದು ಅವರು ಸೂಚನೆ ನೀಡಿದ್ದಾರೆ.
ಇನ್ನು ಇದೇ ಸಂದರ್ಭ ಮಾತನಾಡಿದ ಅವರು, ಅಕ್ರಮ ವಲಸಿಗರು ಹಾಗೂ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿರುವ ವಿದೇಶಿಗರನ್ನು ಪತ್ತೆ ಹಚ್ಚಲು ಆದೇಶ ನೀಡಿದ್ದಾರೆ. ಈಗಾಗಲೇ ಪತ್ತೆ ಹಚ್ಚಿರುವ 107 ಮಂದಿಯನ್ನು ಗಡಿಪಾರು ಮಾಡಲು ಕೇಂದ್ರ ಸರಕಾರದ ಜೊತೆ ಚರ್ಚೆ ನಡೆಸಲಾಗಿದೆ ಎಂದು ಸಚಿವ ಡಾ. ಪರಮೇಶ್ವರ್ ತಿಳಿಸಿದ್ದಾರೆ.