ಮಂಗಳೂರು, ಸೆ 13(SM): ಇಲ್ಲಿನ ಗ್ರಾಮಾಂತರ ಠಾಣಾ ವ್ಯಾಪ್ತಿಯ ವಲಚ್ಚಿಲ್, ಅಡ್ಯಾರ್ ಮತ್ತು ಅರ್ಕುಳ ಗಳಲ್ಲಿ ಖಾಸಾಗಿ ಸ್ಥಳದಲ್ಲಿ ಅಕ್ರಮವಾಗಿ ಮರಳು ದಾಸ್ತಾನು ಮಾಡಲಾಗಿದೆ ಎಂಬ ಕುರಿತು ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು 750 ಟನ್ ಮರಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ವಶಕ್ಕೆ ಪಡೆದಿರುವ ಮರಳಿನ ಮೌಲ್ಯ ಸುಮಾರು ಐದು ಲಕ್ಷ ರೂಪಾಯಿಗಳೆಂದು ಅಂದಾಜಿಸಲಾಗಿದೆ.
ಮಂಗಳೂರು ದಕ್ಷಿಣ ವಿಭಾಗದ ಎ.ಸಿ.ಪಿ., ದಕ್ಷಿಣ ಉಪ ವಿಭಾಗದ ರೌಡಿ ನಿಗ್ರಹದಳ ಮತ್ತು ಮಂಗಳೂರು ಗ್ರಾಮಾಂತರ ಠಾಣಾ ಪೊಲೀಸರು ದಾಳಿ ನಡೆಸಿ ಅಕ್ರಮ ಮರಳು ದಾಸ್ತಾನು ಅಡ್ಡೆಯನ್ನು ಪತ್ತೆ ಹಚ್ಚಿದ್ದಾರೆ. ಬಳಿಕ ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಮಾಹಿತಿ ನೀಡಿದ್ದು, ವಶಕ್ಕೆ ಪಡೆಯಲಾದ ಮರಳನ್ನು ಇಲಾಖೆಗೆ ಹಸ್ತಾಂತರಿಸಲಾಗಿದೆ. ಇನ್ನು ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಆರೋಪಿಗಳ ಪತ್ತೆಗೆ ಶೋಧ ಮುಂದುವರೆದಿದೆ.