ಮಂಗಳೂರು, ಅ 09(SM): ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕುದ್ರೋಳಿಯ ಕಸಾಯಿಖಾನೆಯ ಅಭಿವೃದ್ಧಿಗೆ ಸ್ಮಾರ್ಟ್ ಸಿಟಿ ಯೋಜನೆ ಅನುದಾನ ಬಳಕೆ ಮಾಡಿರೋದಕ್ಕೆ ಬಿಜೆಪಿ ಪಕ್ಷ ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದರೆ, ಜೆಡಿಎಸ್ ಮಾತ್ರ ಸಚಿವ ಖಾದರ್ ಪರ ಬ್ಯಾಟಿಂಗ್ ಮಾಡಿದೆ.
ಮಂಗಳೂರಿನ ಖಾಸಗಿ ಹೊಟೇಲ್ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಜೆಡಿಎಸ್ ಜಿಲ್ಲಾಧ್ಯಕ್ಷ ಮುಹಮ್ಮದ್ ಕುಂಞಿ, ಮಂಗಳೂರು ನಗರ ಸ್ಮಾರ್ಟ್ ಸಿಟಿ ಯೋಜನೆಗೆ ಆಯ್ಕೆಯಾಗಿದ್ದು, ಇಲ್ಲಿ ನಡೆಯಬೇಕಾದ ಅಭಿವೃದ್ಧಿ ಕಾರ್ಯಗಳ ಕಡೆಗೆ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಖಾದರ್ ಸಲಹೆಗಳನ್ನು ನೀಡಿದ್ದಾರೆ. ಅವರು ತಮ್ಮಿಷ್ಟದಂತೆ ಯಾವುದೇ ನಿರ್ಧಾರಗಳನ್ನು ಕೈಗೊಂಡಿಲ್ಲ.
ಕಸಾಯಿ ಖಾನೆಯ ಅಭಿವೃದ್ಧಿಗೆ 15 ಕೋ.ರೂ. ಬಿಡುಗಡೆಯಾಗಿಲ್ಲ. ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಕಸಾಯಿಖಾನೆ ಅಭಿವೃದ್ಧಿಗೂ ಅನುದಾನ ಬಳಸಿ ಎಂದು ಅಧಿಕಾರಿಗಳ, ಜನಪ್ರತಿನಿಧಿಗಳ ಮಟ್ಟದಲ್ಲಿ ನಡೆದ ಸಭೆಯಲ್ಲಿ ಸಲಹೆ ನೀಡಿದ್ದಾರೆ. ಈ ಸಭೆಯಲ್ಲಿ ಬಿಜೆಪಿಯ ಜನಪ್ರತಿನಿಧಿಗಳು ಕೂಡ ಭಾಗವಹಿಸಿದ್ದರು. ಆದರೆ, ಸಭೆಯಲ್ಲಿ ಮಾತನಾಡದ ಬಿಜೆಪಿಗರು ಇದೀಗ ವಿರೋಧಿಸುವ ಅಗತ್ಯವಾದರೂ ಏನಿತ್ತು? ಎಂದು ಅವರು ಪ್ರಶ್ನಿಸಿದ್ದಾರೆ.
ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಸರಕಾರ ಉತ್ತಮ ಆಡಳಿತ ನೀಡುತ್ತಿವೆ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಅಧಿಕಾರ ನಡೆಸುತ್ತಿದ್ದಾರೆ. ಇದನ್ನು ಸಹಿಸಲಾಗದೆ ಬಿಜೆಪಿಗರು ಸಚಿವರ ವಿರುದ್ಧ ಇಲ್ಲ ಸಲ್ಲದ ಆರೋಪಗಳನ್ನು ನಡೆಸುತ್ತಿದ್ದಾರೆ ಎಂದರು.