ಉಡುಪಿ, ಅ 12(SM): ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಕೇಂದ್ರದ ಕಿರಿಯ ಪುರುಷ ಆರೋಗ್ಯ ಸಹಾಯಕರೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಶಿವಮೊಗ್ಗ ಜಿಲ್ಲೆಯ ಭದ್ರವಾತಿ ತಾಲೂಕಿನ ವಿಠಲಪುರ ನಿವಾಸಿ ಈಶ್ವರಪ್ಪ ಎಂ.ಕೆ. ಎಂಬವರ ಪುತ್ರ, ಕಿರಿಯ ಪುರುಷ ಆರೋಗ್ಯ ಸಹಾಯಕ ನಾಗರಾಜ್ ಎಂ.ಇ.(24) ಆತ್ಮಹತ್ಯೆಗೆ ಯತ್ನಿಸಿದವರು.
ತೀವ್ರ ಅಸ್ವಸ್ಥ ಅಗಿರುವ ನಾಗರಾಜ್ ಅವರನ್ನು ಸದ್ಯ ಮಣಿಪಾಲ ಆಸ್ಪತ್ರೆಯ ತುರ್ತು ನಿಗಾ ಘಟಕಕ್ಕೆ ದಾಖಲಿಸಲಾಗಿದೆ. ಅವರು ಕಳೆದ ಮೂರು ತಿಂಗಳ ಹಿಂದೆ ಆರೋಗ್ಯಇಲಾಖೆಯ ಸೇವೆಗೆ ಸೇರ್ಪಡೆಗೊಂಡಿದ್ದರು. ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರದ ಕಿರಿಯ ಪುರುಷ ಸಹಾಯಕನಾಗಿ ಕರ್ತವ್ಯ ಸಲ್ಲಿಸುತ್ತಿದ್ದರು.
ಅ.10ರಂದು ರಾತ್ರಿ ತಮ್ಮ ಕೋಣೆಯಲ್ಲಿ ಮಾತ್ರೆ, ಬ್ಲೀಚಿಂಗ್ ಪೌಡರ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮರುದಿನ ಬೆಳಿಗ್ಗೆ ಕೆಲಸಕ್ಕೆ ಹಾಜರಾಗಿದ್ದು, ಈ ವೇಳೆ ಕಚೇರಿಯಲ್ಲಿಯೇ ತೀವ್ರ ಅಸ್ವಸ್ಥಗೊಂಡಿದ್ದರು. ಕೂಡಲೇ ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಿಂದ ಬ್ರಹ್ಮಾವರ ಪೊಲೀಸ್ ಠಾಣೆಗೆ ಮಾಹಿತಿಯನ್ನು ರವಾನಿಸಲಾಗಿದೆ.
ಆದರೂ ಇದುವರೆಗೂ ಪ್ರಕರಣ ದಾಖಲಾಗಿಲ್ಲ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.