ಮಡಿಕೇರಿ, ಅ 18(SM): ಕಳೆದ ತಿಂಗಳು ಸುರಿದ ಭಾರೀ ಮಳೆಯಿಂದಾಗಿ ಅಪಾರ ಹಾನಿಗೊಂಡಿರುವ ಕೊಡಗು ಜಿಲ್ಲೆಯನ್ನು ಪುನರ್ ನಿರ್ಮಾಣಗೊಳಿಸಲು ಪ್ರಾಧಿಕಾರ ರಚಿಸಲಾಗುವುದೆಂದು ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದ್ದಾರೆ.
ನಗರದ ಗಾಂಧಿ ಮೈದಾನದಲ್ಲಿ ನಡೆದ ಸಂವಾದದಲ್ಲಿ ಜನರ ಸಮಸ್ಯೆಗಳನ್ನು ಆಲಿಸಿದ ಬಳಿಕ ಸಿಎಂ ಪ್ರತಿಕ್ರಿಯೆ ನೀಡಿದರು. ಕೊಡಗು ಪುನರ್ ನಿರ್ಮಾಣ ಪ್ರಾಧಿಕಾರವನ್ನು ಶೀಘ್ರದಲ್ಲೇ ನನ್ನ ಅಧ್ಯಕ್ಷತೆಯಲ್ಲಿ ರಚಿಸಲಾಗುವುದು. ಇದರಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸ್ಥಳೀಯ ಜನ ಪ್ರತಿನಿಧಿಗಳು ಸದಸ್ಯರಾಗಿರುತ್ತಾರೆ ಎಂದರು.
ಜಿಲ್ಲೆಯಲ್ಲಿ ಮಳೆಯಿಂದ ಹಲವೆಡೆ ಆಸ್ತಿಪಾಸ್ತಿ ನಷ್ಟ ಸಂಭವಿಸಿದ್ದು, ಮತ್ತೆ ಸರ್ವತೋಮುಖ ಅಭಿವೃದ್ಧಿಯಾಗಬೇಕಿದೆ. ಈ ಕುರಿತಂತೆ ಈಗಾಗಲೇ ಹಲವಾರಿಂದ ಅಧ್ಯಯನ ವರದಿಗಳು ಲಭ್ಯವಾಗಿದೆ. ಮುಂದಿನ ಮಳೆಗಾಲದ ಮೊದಲು ಶಾಶ್ವತ ಪರಿಹಾರ ಕ್ರಮಕೈಗೊಳ್ಳುತ್ತೇನೆ ಎಂದು ಸಿಎಂ ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.
ಇನ್ನು ಪ್ರವಾಹ ಸಂತ್ರಸ್ತರ ಪರಿಹಾರ ನಿಧಿಗೆ 122 ಕೋ.ರೂ. ಹಣ ಬಿಡುಗಡೆಯಾಗಿದೆ. ಮುಖ್ಯಮಂತ್ರಿ ಪರಿಹಾರ ನಿಧಿಗೆ ಬಂದ ಹಣವನ್ನು ಇದುವರೆಗೂ ಬಳಕೆ ಮಾಡಿಲ್ಲ. ತುರ್ತು ಪರಿಹಾರಕ್ಕೆ ಹಣವನ್ನು ಸರಕಾರದ ಖಜಾನೆಯಿಂದಲೇ ನೀಡಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.