ಶಿವಮೊಗ್ಗ, ಅ27(SS): ನನಗೆ ಮತ್ತೊಮ್ಮೆ ರಾಜ್ಯದ ಮುಖ್ಯಮಂತ್ರಿಯಾಗಬೇಕು ಎಂಬ ದುರಾಸೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜನ ಆಶೀರ್ವಾದ ಮಾಡಿದರೆ ನೋಡೋಣ. ಆದರೆ ಮತ್ತೊಮ್ಮೆ ಸಿಎಂ ಆಗಬೇಕು ಎಂಬ ದುರಾಸೆ ನನಗೆ ಇಲ್ಲ ಎಂದು ತಿಳಿಸಿದ್ದಾರೆ.
ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಮಾಜಿ ಸಿಎಂ, ಯಡಿಯೂರಪ್ಪ ಮತ್ತೆ ಸಿಎಂ ಆಗುತ್ತೇನೆ ಎನ್ನುವುದು ಕೇವಲ ಭ್ರಮೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಪವಿತ್ರ ಎಂದು ಹೇಳುತ್ತಾರೆ. ಆದರೆ, ಜೆಡಿಎಸ್ ಜತೆ ಬಿಜೆಪಿ ಮೈತ್ರಿ ಮಾಡಿಕೊಂಡಿರಲಿಲ್ವಾ...? ಬೇರೆ ಬೇರೆ ರಾಜ್ಯಗಳಲ್ಲೂ ಇತರೆ ಪಕ್ಷಗಳ ಜೊತೆ ಬಿಜೆಪಿ ಮೈತ್ರಿ ಮಾಡಿಕೊಂಡಿಲ್ವಾ...? ಇದು ಪವಿತ್ರ ಮೈತ್ರಿಯೋ ಎಂದು ಪ್ರಶ್ನಿಸಿದ್ದಾರೆ.
ಉಪಚುನಾವಣೆಯಲ್ಲಿ ಐದು ಕ್ಷೇತ್ರಗಳಲ್ಲೂ ಗೆದ್ದೇ ಗೆಲ್ಲುತ್ತೇವೆ. ಮೈತ್ರಿ ಸರ್ಕಾರಕ್ಕೂ, ಉಪ ಚುನಾವಣಾ ಫಲಿತಾಂಶಕ್ಕೂ ಯಾವುದೇ ಸಂಬಂಧವಿಲ್ಲ. ಈ ಸರ್ಕಾರ ಬೀಳುವುದಿಲ್ಲ. ಐದು ವರ್ಷ ಭದ್ರವಾಗಿರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.