ಬೆಂಗಳೂರು, ನ 06(SM): ನಾನು ಯಾವತ್ತು ಟಿಪ್ಪು ಜಯಂತಿ ಆಚರಣೆಯನ್ನು ವಿರೋಧ ಮಾಡಿಲ್ಲ. ಟಿಪ್ಪು ಜಯಂತಿ ಇಷ್ಟ ಇಲ್ಲದವರು ಮನೆಯಲ್ಲೇ ಇರಲಿ ಎಂದು ಸಿಎಂ ಕುಮಾರಸ್ವಾಮಿ ಗುಡುಗಿದ್ದಾರೆ.
ಉಪಚುನಾವಣೆಯ ಫಲಿತಾಂಶ ಪ್ರಕಟಗೊಂಡ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನು ಯಾವತ್ತು ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ಮಾಡುವುದನ್ನು ವಿರೋಧ ಮಾಡಿಲ್ಲ. ಬಿಜೆಪಿಯವರಿಗೆ ಇಷ್ಟ ಇಲ್ಲ ಅಂದರೆ ಮನೆಯಲ್ಲಿ ಕೂರಲಿ. ಅದು ಬಿಟ್ಟು ಟಿಪ್ಪು ಜಯಂತಿ ಆಚರಣೆಯಲ್ಲಿ ರಾಜಕೀಯ ಮಾಡಬೇಡಿ. ಸಾರ್ವಜನಿಕ ಆಸ್ತಿಗೆ ಹಾನಿ ಮಾಡಿದರೆ ಕಠಿಣ ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಿದ್ದೇನೆ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.
ಈ ಹಿಂದೆ ಜೆಡಿಎಸ್ ಪಕ್ಷದ ಕಚೇರಿಯಲ್ಲಿಯೇ ಟಿಪ್ಪು ಜಯಂತಿಯನ್ನು ನಾನು ಆಚರಣೆ ಮಾಡಿದ್ದೇನೆ. ಸಮ್ಮಿಶ್ರ ಸರ್ಕಾರದ ಅವಧಿಯಲ್ಲೂ ಈ ಕಾರ್ಯಕ್ರಮ ಮುಂದುವರೆಯಲಿದೆ. ಸಾರ್ವಜನಿಕ ಆಸ್ತಿಗೆ ತೊಂದರೆಯನ್ನುಂಟು ಮಾಡಿದ್ದಲ್ಲಿ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.