ಮಂಗಳೂರು, 07(SS): ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಡಿಗೆ ನಿರ್ವಹಿಸಲೆಂದು ಪ್ರಯಾಣಿಕರನ್ನು ಕರೆದುಕೊಂಡು ಹೋಗಿದ್ದ ಓಲಾ ಕಾರು ಚಾಲಕರ ಮೇಲೆ ಸ್ಥಳೀಯ ಕಾರು ಚಾಲಕರು ಹಲ್ಲೆ ನಡೆಸಿದ ಘಟನೆ ನಡೆದಿದೆ.
ಓಲಾ ಚಾಲಕರು ಮನವಿ ನೀಡಲು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳಿದ ಸಂದರ್ಭ ಸ್ಥಳೀಯ ಕಾರು ಚಾಲಕರು ಇವರನ್ನು ತರಾಟೆಗೆ ತೆಗೆದುಕೊಂಡಿದ್ದು, ಅಲ್ಲಿಂದ ತೆರಳುವಂತೆ ಸೂಚಿಸಿದ್ದಾರೆ. ಆದರೆ, ಓಲಾ ಕಾರು ಚಾಲಕರು ತೆರಳಲು ನಿರಾಕರಿಸಿದಾಗ ಸ್ಥಳೀಯ ಕಾರು ಚಾಲಕರು ಇವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗಿದೆ.
ಸುಮಾರು 25ಕ್ಕೂ ಮಿಕ್ಕಿ ಓಲಾ ಚಾಲಕರ ಮೇಲೆ ಹಲ್ಲೆ ನಡೆದಿದ್ದು, ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದರಲ್ಲಿ ಓರ್ವ ಚಾಲಕನಿಗೆ ಗಂಭೀರ ಹಲ್ಲೆಯಾಗಿದೆ ಎಂದು ತಿಳಿದುಬಂದಿದೆ.
ಘಟನೆಯಿಂದ ಆಕ್ರೋಶಗೊಂಡ ಓಲಾ ಕಾರು ಚಾಲಕರು ಆಗಮಿಸಿ ವಿಮಾನ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಇಲ್ಲಿ ಪ್ರಯಾಣಿಕರನ್ನು ಕರೆದೊಯ್ಯಲು ಬರುವ ಓಲಾ ಕಾರು ಚಾಲಕರ ಮೇಲೆ ನಿರಂತರವಾಗಿ ದಬ್ಬಾಳಿಕೆ ನಡೆಯುತ್ತಿದ್ದು, ಪೊಲೀಸರಿಗೆ ದೂರು ನೀಡಿದರೂ ಕ್ರಮ ಕೈಗೊಳ್ಳುತ್ತಿಲ್ಲ ಎಂದು ತಿಳಿದುಬಂದಿದೆ.
ಇದೀಗ ಸ್ಥಳೀಯ ಕಾರು ಚಾಲಕರ ದಬ್ಬಾಳಿಕೆ ಮಿತಿ ಮೀರಿದ್ದು, ಪೊಲೀಸರು ಕಾನೂನು ಕ್ರಮ ಕೈಗೊಳ್ಳಬೇಕೆಂದು ಓಲಾ ಕಾರು ಚಾಲಕರು ಒತ್ತಾಯಿಸಿದ್ದಾರೆ.
ಈ ಕುರಿತು ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.