ಮಂಗಳೂರು, ನ 18(SM): ಕಳೆದ 3 ದಶಕಗಳಿಂದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಪಾಲಿಗೆ ಸಿಂಹ ಸ್ವಪ್ನವಾಗುತ್ತಿದ್ದು, ಇದೀಗ ಚುನಾವಣೆ ಗೆಲ್ಲಲೇ ಬೇಕೆಂಬ ಹಟಕ್ಕೆ ಬಿದ್ದಿರುವ ಕಾಂಗ್ರೆಸ್ ಪ್ರಬಲ ನಾಯಕನನ್ನು ಕಣಕ್ಕಿಳಿಸಲು ಮುಂದಾಗಿದೆ. ಇತ್ತೀಚಿಗಷ್ಟೇ ದಕ್ಷಿಣ ಕನ್ನಡ ಜಿಲ್ಲೆಗೆ ಅಮಿತ್ ಶಾ ಆಗಮಿಸಿದ ಬೆನ್ನಲ್ಲೇ ಕಾಂಗ್ರೆಸ್ ಎಚ್ಚೆತ್ತುಕೊಂಡಿದೆ.
ಸಂಸದ ನಳಿನ್ ಕುಮಾರ್ ಕಟೀಲ್ ರನ್ನು ಸೋಲಿಸಲು ಪ್ರಬಲ ಸ್ಪರ್ಧಿ ರಮಾನಾಥ ರೈ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ನಿರ್ಧರಿಸಿದೆ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿದೆ. ಅಲ್ಲದೆ, ಇಂದು ಮಂಗಳೂರಿನಲ್ಲಿ ಕಾಂಗ್ರೆಸ್ ನ ರಾಜ್ಯ ಚುನಾವಣಾ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಅವರು ರಮಾನಾಥ ರೈ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ನಗರದ ಸರ್ಕ್ಯೂಟ್ ಹೌಸ್ ನಲ್ಲಿ ರಮಾನಾಥ ರೈ ಹಾಗೂ ವೇಣುಗೋಪಾಲ್ ಮಾತುಕತೆ ನಡೆಸಿದ್ದು, ಮುಂದಿನ ಲೋಕಸಭಾ ಚುನಾವಣೆಗೆ ರಮಾನಾಥ ರೈ ಸ್ಪರ್ಧಿಸುವುದು ಬಹುತೇಕ ಖಚಿತ ಎನ್ನಲಾಗಿದೆ. ಈ ಬಗ್ಗೆ ಹೈಕಮಾಂಡ್ ಕೂಡ ಗ್ರೀನ್ ಸಿಗ್ನಲ್ ನೀಡಿದೆ ಎನ್ನಲಾಗಿದೆ.