ಬೆಂಗಳೂರು, ನ 19(SM): ರಾಜ್ಯದ ಕ್ಯಾಬಿನೆಟ್ ಸಭೆಯಲ್ಲಿ ಮಂಗಳೂರಿನ ಉಳ್ಳಾಲ ವಿಧಾನಸಭಾ ಕ್ಷೇತ್ರದ ಉಳ್ಳಾಲಕ್ಕೆ 198 ಕೋಟಿ ರೂಪಾಯಿ ಅನುದಾನ ಬಿಡುಗಡೆಗೊಳಿಸಲಾಗಿದೆ. ಅಲ್ಲದೆ ಮಂಗಳೂರಿನ ಕಂಕನಾಡಿಯಲ್ಲಿ ಕಮರ್ಶಿಯಲ್ ಕಾಂಪ್ಲೆಕ್ಸ್ ನಿರ್ಮಾಣಕ್ಕೆ 41.5 ಕೋಟಿ ರೂ. ಅನುದಾನವನ್ನು ಬಿಡುಗಡೆಗೊಳಿಸಲಾಗಿದೆ.
ವಿಧಾನಸೌಧದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ಅನುದಾನವನ್ನು ಬಿಡುಗಡೆಗೊಳಿಸಲಾಗಿದೆ. ಅಲ್ಲದೆ ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ಕೋರ್ಟ್ ಸಂಕೀರ್ಣ ನಿರ್ಮಾಣ ಮಾಡಲು ಸುಮಾರು 25 ಕೋಟಿ ರೂ.ಗಳನ್ನು ಬಿಡುಗಡೆಗೊಳಿಸಲಾಗಿದೆ.
ಜಿಲ್ಲೆಯ ಈ ಮೂರು ಯೋಜನೆಗಳಿಗೆ ಬಿಡುಗಡೆಗೊಂಡ ಒಟ್ಟು ಮೊತ್ತ ಸುಮಾರು 264.8 ಕೋಟಿ ರೂಪಾಯಿಗಳು. ಇದು ಮಾತ್ರವಲ್ಲದೆ ರಾಜ್ಯದ ವಿವಿಧ ಪ್ರದೇಶಗಳ ಅಭಿವೃದ್ಧಿಗೆ ಹಲವಾರು ಕೋಟಿ ಅನುದಾನವನ್ನು ಕೂಡ ಮೀಸಲಿಡಲಾಗಿದೆ.