ಮಂಗಳೂರು, ನ 23(MSP): ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಶಾಸನ ರಚಿಸುವಂತೆ ಕೇಂದ್ರ ಸರಕಾರದ ಮೇಲೆ ಒತ್ತಡ ಹಾಕಲು ಹಾಗೂ ಮಂದಿರ ನಿರ್ಮಾಣಕ್ಕೆ ಒತ್ತಾಯಿಸಿ ನ. 25ರ ಭಾನುವಾರ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಆಯೋಜಿಸಿರುವ ನ. 25 ರ ಭಾನುವಾರ ''ಬೃಹತ್ ಜನಾಗ್ರಹ'' ಸಮಾವೇಶದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಿ ದ.ಕ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ.
ಹೀಗಾಗಿ ನ.25 ರಂದು ಭಾನುವಾರ ಯಾವುದೇ ಬಾರ್, ವೈನ್ ಶಾಪ್ ಗಳನ್ನು ತೆರೆಯುವಂತಿಲ್ಲ. ಅಂದು ಬೆಳಿಗ್ಗೆ 6 ರಿಂದ ರಾತ್ರಿ 12ರವರೆಗೆ ಮದ್ಯದಂಗಡಿ ಮುಚ್ಚಲು ಡಿಸಿ ಆದೇಶದಲ್ಲಿ ತಿಳಿಸಿದ್ದಾರೆ.
ಆಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಆಗ್ರಹಿಸಿ ವಿಎಚ್ ಪಿ ಮತ್ತು ಬಜರಂಗದಳ ನೇತೃತ್ವದಲ್ಲಿ ಬೃಹತ್ ಸಮಾವೇಶವು ನಗರದ ಕೇಂದ್ರ ಮೈದಾನದಲ್ಲಿ ನಡೆಯಲಿದ್ದು, 50 ಸಾವಿರ ಜನ ಸೇರುವ ನಿರೀಕ್ಷೆ ಇದೆ. ಅಲ್ಲದೇ ಸಮಾವೇಶಕ್ಕೆ ಪುತ್ತೂರು, ಸುಳ್ಯ, ಬೆಳ್ತಂಗಡಿ ಮತ್ತು ಕಾಸರಗೋಡು ಭಾಗದಿಂದಲೂ ಭಾರೀ ಸಂಖ್ಯೆಯ ಜನರು ಆಗಮಿಸುವ ನಿರೀಕ್ಷೆ ಇರುವ ಹಿನ್ನಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಈ ಆದೇಶ ಹೊರಡಿಸಲಾಗಿದೆ.