ಮಂಗಳೂರು, ನ 28(SM): ನಗರದ ತೋಟ ಬೆಂಗ್ರೆ ಬೀಚ್ ನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಶಾಸಕ ಡಿ. ವೇದವ್ಯಾಸ ಕಾಮತ್ ತೀವ್ರವಾಗಿ ಖಂಡಿಸಿದ್ದಾರೆ. ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಶಾಸಕರು, ಈ ಘಟನೆಯ ಬಗ್ಗೆ ಮಾಹಿತಿ ತಿಳಿದ ತಕ್ಷಣ ಮಂಗಳೂರಿನ ಉನ್ನತ ಪೊಲೀಸ್ ಅಧಿಕಾರಿಗಳೊಂದಿಗೆ ನಾನು ಮಾತನಾಡಿದ್ದು, ತಪ್ಪಿತಸ್ಥರನ್ನು ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ ಎಂದರು.
ಯುವ ಜನಾಂಗ ಗಾಂಜಾ, ಅಫೀಮು, ಚರಸ್ ನಂತಹ ಡ್ರಗ್ಸ್ ಸೇವಿಸುತ್ತಿರುವುದೇ ಇಂತಹ ಘಟನೆಗಳು ಹೆಚ್ಚುತ್ತಿದೆ. ಡ್ರಗ್ಸ್ ಜಾಲವನ್ನು ಸಂಪೂರ್ಣವಾಗಿ ಕೊನೆಗೊಳಿಸದಿದ್ದರೆ ಇಂತಹ ಘಟನೆಗಳು ತಡೆಯಲು ಸಾಧ್ಯವಿಲ್ಲ. ಪೊಲೀಸ್ ಇಲಾಖೆ ಡ್ರಗ್ಸ್ ಜಾಲವನ್ನು ಮಟ್ಟ ಹಾಕಲು ತೆಗೆದುಕೊಳ್ಳುವ ಯಾವುದೇ ಕ್ರಮಕ್ಕೂ ಶಾಸಕನಾಗಿ ನಾನು ಸಂಪೂರ್ಣ ಬೆಂಬಲಿಸುತ್ತೇನೆ ಎಂದು ಹೇಳಿದರು.
ಡ್ರಗ್ಸ್ ಮಾರಾಟಗಾರರನ್ನು ಬಂಧಿಸಿ ಅವರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಂಡರೆ ಡ್ರಗ್ಸ್ ಮಾಫಿಯಾಕ್ಕೆ ಮುಕ್ತಿ ಹಾಡಬಹುದು. ಶಾಸಕನಾಗಿ ನಾನು ಆಯ್ಕೆಯಾದ ಬಳಿಕ ಡ್ರಗ್ಸ್ ಜಾಲವನ್ನು ಮಟ್ಟ ಹಾಕಲು ಇಲಾಖೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ನಾನು ಚರ್ಚಿಸಿದ್ದೇನೆ ಎಂದರು.