ಉಡುಪಿ, ಡಿ 21(SM): ಜಿಲ್ಲೆಯ ದೇವಾಲಯಗಳಲ್ಲಿ ಭಕ್ತರಿಗೆ ಪ್ರಸಾದ ವಿನಿಯೋಗ ಮತ್ತು ದಾಸೋಹ ಏರ್ಪಡಿಸುವ ಸಂದರ್ಭದಲ್ಲಿ ಅಗತ್ಯ ಎಚ್ಚರಿಕಾ ಕ್ರಮಗಳನ್ನು ವಹಿಸುವ ಕುರಿತು ಎಲ್ಲಾ ದೇವಾಲಯಗಳ ಆಡಳಿತ ಮಂಡಳಿಗಳ ಮುಖ್ಯಸ್ಥರಿಗೆ ಕಾರ್ಯಾಗಾರ ಏರ್ಪಡಿಸಬೇಕು ಎಂದು ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿಗೆ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಸೂಚಿಸಿದ್ದಾರೆ. ದೇವಾಲಯಗಳ ಆಡಳಿತ ಮಂಡಳಿಗಳಿಗೆ ಆಹಾರ ಸುರಕ್ಷತಾ ಕ್ರಮಗಳ ಕುರಿತು ಮಾಹಿತಿ ನೀಡುವಂತೆ ತಿಳಿಸಿದ್ದಾರೆ.
ಅವರು ಶುಕ್ರವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಸಲಹಾ ಸಮಿತಿ ಸಭೆ ಹಾಗೂ ಜಿಲ್ಲಾ ತಂಬಾಕು ನಿಷೇಧ ಕೋಶದ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು. ಇತ್ತೀಚೆಗೆ ಚಾಮರಾಜ ನಗರ ಜಿಲ್ಲೆಯ ಹನೂರು ತಾಲೂಕಿನ ದೇವಾಲಯದಲ್ಲಿ ನಡೆದ ದುರಂತದದ ಹಿನ್ನೆಲೆ, ದೇವಾಲಯಗಳಲ್ಲಿ ದಾಸೋಹ ಮತ್ತು ಪ್ರಸಾದ ತಯಾರಿಸುವಾಗ ಅಗತ್ಯ ರೀತಿಯ ಎಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕಿದ್ದು ಪ್ರಸಾದ ತಯಾರಿಕೆ ಕೋಣೆ ಮತ್ತು ದಾಸೋಹ ತಯಾರಿಸುವ ಅಡುಗೆ ಕೋಣೆಗೆ ಕಡ್ಡಾಯವಾಗಿ ಸಿಸಿ ಟಿವಿ ಅಳವಡಿಸಬೇಕು. ಈ ಕೋಣೆಗಳಿಗೆ ಯಾರೇ ಅನಧಿಕೃತ ವ್ಯಕ್ತಿಗಳು ಪ್ರವೇಶಿಸದಂತೆ ನಿಗಾ ವಹಿಸುವಂತೆ, ತಯಾರಿಸಿರುವ ನೈವೇದ್ಯ, ಪ್ರಸಾದ, ಅಡುಗೆ ಸ್ವೀಕರಿಸಲು ಯೋಗ್ಯವಾಗಿರುವ ಬಗ್ಗೆ ಖಚಿತಪಡಿಸಿಕೊಂಡು ನಂತರ ವಿತರಣೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಸುರಕ್ಷಿತ ಆಹಾರ ತಯಾರಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಜಿಲ್ಲೆಯ ದೇವಾಲಯಗಳ ಆಡಳಿತ ಮಂಡಳಿಗಳ ಮುಖ್ಯಸ್ಥರಿಗೆ ಪ್ರತ್ಯೇಕ ಕಾರ್ಯಾಗಾರ ಏರ್ಪಡಿಸುವಂತೆ ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲೆಯಿಂದ ಗೋವಾಕ್ಕೆ ತೆರಳುವ ಮೀನು ಸಾಗಾಟ ವಾಹನಗಳ ಮಾಲೀಕರು ಆಹಾರ ಸುರಕ್ಷತಾ ಅಧಿಕಾರಿಗಳಿಂದ ಪ್ರಮಾಣ ಪತ್ರ ಪಡೆಯುವಂತೆ ಸೂಚಿಸಿದ ಜಿಲ್ಲಾಧಿಕಾರಿ, ಜಿಲ್ಲೆಯ ಶಾಲೆಗಳಲ್ಲಿ ಮಕ್ಕಳಿಗೆ ಬಿಸಿಯೂಟ ತಯಾರಿಕೆಗೆ ಬಳಸುವ ಪದಾರ್ಥಗಳ ಗುಣಮಟ್ಟದ ಕುರಿತು ಆಹಾರ ಸುರಕ್ಷತಾ ಅಧಿಕಾರಿಗಳು ಆಗಿಂದಾಗ್ಗೆ ಭೇಟಿ ನೀಡಿ ಪರಿಶೀಲಿಸುವಂತೆ ಹಾಗೂ ಆಹಾರ ಪದಾರ್ಥಗಳು ಸರಬರಾಜು ಆಗುವ ಗೋಡೌನ್ಗಳಿಗೆ ಸಹ ಭೇಟಿ ನೀಡಿ ಕೈಗೊಂಡಿರುವ ಸುರಕ್ಷತಾ ಕ್ರಮಗಳು ಮತ್ತು ಅಲ್ಲಿರುವ ಆಹಾರ ಪದಾರ್ಥಗಳ ಗುಣಮಟ್ಟ ಕುರಿತು ಪರಿಶೀಲಿಸುವಂತೆ ಹಾಗೂ ಈ ಕುರಿತು ತಮಗೆ ವರದಿಯನ್ನು ನೀಡುವಂತೆ ಸೂಚಿಸಿದರು.