ಮಂಗಳೂರು, ಡಿ 21(SM): ಐಎಡಿಬಿ ಭೂಮಿ ಒತ್ತುವರಿಗೆ ಮುಂದಾಗಿರುವುದನ್ನು ವಿರೋಧಿಸಿ ಕೃಷಿ ಭೂಮಿ ಸಂರಕ್ಷಣಾ ಸಮಿತಿ ವತಿಯಿಂದ ಸಾಮಾಜಿಕ ಕಾರ್ಯಕರ್ತೆ ವಿದ್ಯಾ ದಿನಕರ್ ನೇತೃತ್ವದಲ್ಲಿ ಕರಾವಳಿ ಉತ್ಸವ ಕಾರ್ಯಕ್ರಮಕ್ಕೆ ಘೇರಾವ್ ಹಾಕಿದ ಘಟನೆ ನಡೆದಿದೆ.
ದ.ಕ. ಜಿಲ್ಲಾಡಳಿತದ ವತಿಯಿಂದ ನಗರದ ಕರಾವಳಿ ಉತ್ಸವ ಮೈದಾನದಲ್ಲಿ ಕರಾವಳಿ ಉತ್ಸವದ ಉದ್ಘಾಟನಾ ಸಮಾರಂಭ ನಡೆಯುತ್ತಿದ್ದಂತಹ ಸಂದರ್ಭ ಏಕಾಏಕಿ ಆಗಮಿಸಿದ ಹೋರಾಟಗಾರರು, ಉದ್ಘಾಟನೆ ವೇದಿಕೆಯಲ್ಲಿ ಕರಾವಳಿ ಉಳಿಸಿ ಬ್ಯಾನರ್ ಗಳನ್ನು ವೇದಿಕೆಗೆ ಅಡ್ಡಲಾಗಿ ಹಿಡಿದು ಪ್ರತಿಭಟನೆ ನಡೆಸಿದರು.
ಈ ಸಂದರ್ಭ ವೇದಿಕೆಯಲ್ಲಿದ್ದಂತಹ ಸಚಿವ ಖಾದರ್, ಸಂಗೀತ ನಿರ್ದೇಶಕ ಗುರುಕಿರಣ್, ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ಪೊಲೀಸ್ ಕಮಿಷನರ್ ಟಿ.ಆರ್. ಸುರೇಶ್ ಏಕಾಏಕಿ ಪ್ರತಿಭಟನೆಯನ್ನು ಕಂಡು ಕಕ್ಕಾಬಿಕ್ಕಿಯಾಗಿದ್ದಾರೆ.