ಮಂಗಳೂರು, ಡಿ 30(SM): ಹೊಸ ವರ್ಷಾಚರಣೆ ಸಂದರ್ಭದಲ್ಲಿ ರಾತ್ರಿ ವೇಳೆಯಲ್ಲಿ ಮಂಗಳೂರು ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ಸಾರ್ವಜನಿಕರಿಗೆ, ಹಾಗೂ ಸಾರ್ವಜನಿಕರು ನಡೇಸುವ ಕಾರ್ಯಕ್ರಮಗಳು, ಹೊಟೇಲ್, ರೆಸ್ಟೋರೆಂಟ್, ಕ್ಲಬ್, ರೆಸಾರ್ಟ್ ಮತ್ತು ಸಂಘ ಸಂಸ್ಥೆಗಳಿಗೆ ಅಗತ್ಯ ಸೂಚನೆಗಳನ್ನು ಪೊಲೀಸ್ ಆಯುಕ್ತ ಟಿ.ಆರ್. ಸುರೇಶ್ ನೀಡಿದ್ದಾರೆ. ಹಾಗೂ ಅವುಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಆದೇಶಿಸಿದ್ದಾರೆ.
ಡಿ.31ರ ರಾತ್ರಿ ಆರಂಭವಾಗುವ ಹೊಸ ವರ್ಷಾಚರಣೆಯ ಸಂತೋಷ ಕೂಟಗಳನ್ನು ಆಚರಿಸುವ ಯಾವುದೇ ಹೊಟೇಲ್, ರೆಸ್ಟೋರೆಂಟ್, ಕ್ಲಬ್, ರೆಸಾರ್ಟ್ ಮತ್ತು ಸಂಘ ಸಂಸ್ಥೆಗಳ ಮಾಲಕರು, ವ್ಯವಸ್ಥಾಪಕರು ಅಥವಾ ಆಡಳಿತ ವರ್ಗದವರು ಪೊಲೀಸ್ ಕಮಿಷನರ್ ಕಚೇರಿಯಿಂದ ಪೂರ್ವಾನುಮತಿ ಕಡ್ಡಾಯವಾಗಿ ಪಡೆಯಬೇಕು. ಅನುಮತಿ ಪಡೆಯದೆ ಕಾರ್ಯಕ್ರಮ ನಡೆಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ಎಲ್ಲ ಕಾರ್ಯಕ್ರಮಗಳನ್ನು ಮಧ್ಯರಾತ್ರಿ 12 ಗಂಟೆಯೊಳಗೆ ಮುಕ್ತಾಯಗೊಳಿಸಬೇಕು. ಕಾರ್ಯಕ್ರಮ ಆಯೋಜಕರು ವಿವಿಧ ಇಲಾಖೆಗಳಿಂದ ಪಡೆದ ಪರವಾನಿಗೆಯಲ್ಲಿ ನೀಡಿದ ನಿಬಂಧನೆಗಳನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕು. ಕಾರ್ಯಕ್ರಮ ಆಯೋಜಕರು ತುರ್ತು ಪರಿಸ್ಥಿತಿಯನ್ನು ಎದುರಿಸಲು ಅಗ್ನಿಶಾಮಕ ವಾಹನ, ತುರ್ತು ಚಿಕಿತ್ಸಾ ವಾಹನ ಮತ್ತಿತರ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದು ಅಗತ್ಯ ಎಂದು ಅವರು ತಿಳಿಸಿದ್ದಾರೆ.
ರೆಸ್ಟೋರೆಂಟ್ ಮತ್ತು ಮದ್ಯಪಾನ ಸರಬರಾಜು ಮಾಡುವ ಹೊಟೇಲ್ಗಳಲ್ಲಿ ಸರಕಾರ ನಿಗದಿಪಡಿಸಿದ ಸಮಯಕ್ಕಿಂತ ಹೆಚ್ಚುವರಿ ಸಮಯ ಮದ್ಯ ವಿತರಿಸಲು ಉದ್ದೇಶಿಸಿದರೆ ಅಬಕಾರಿ ಇಲಾಖೆಯಿಂದ ಲಿಖಿತವಾಗಿ ಅನುಮತಿಯನ್ನು ಕಡ್ಡಾಯವಾಗಿ ಪಡೆಯಬೇಕು. ಅನುಮತಿ ಪಡೆದ ಪತ್ರದ ಪ್ರತಿಯನ್ನು ಅರ್ಜಿಯೊಂದಿಗೆ ಕಮಿಷನರ್ ಕಚೇರಿಗೆ ಸಲ್ಲಿಸುವುದು. ಮಹಿಳೆಯರ ಸುರಕ್ಷತೆಗಾಗಿ ಪ್ರತ್ಯೇಕ ಮಹಿಳಾ ಭದ್ರತಾ ಸಿಬ್ಬಂದಿಯನ್ನು ಆಯೋಜಕರು ನೇಮಿಸಬೇಕು ಎಂದು ಪೊಲೀಸ್ ಆಯುಕ್ತರು ಆದೇಶವನ್ನು ಹೊರಡಿಸಿದ್ದಾರೆ.