ಬೆಂಗಳೂರು, ಡಿ31(SS): ರೈತರ ಸಾಲಮನ್ನಾ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದಾರಿ ತಪ್ಪಿಸುವ ಹೇಳಿಕೆ ನೀಡುತ್ತಿರುವುದು ಸರಿಯಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಕರ್ನಾಟಕ ರಾಜ್ಯದ ರೈತರ ಸಾಲಮನ್ನಾ ಕುರಿತು ಪ್ರಧಾನ ಮಂತ್ರಿಯವರ ಹೇಳಿಕೆ ಅತ್ಯಂತ ದುರದೃಷ್ಟಕರ ಹಾಗೂ ದೇಶದ ದೌರ್ಭಾಗ್ಯ. ಈ ಹೇಳಿಕೆ ರಾಜ್ಯದ ರೈತರೂ ಸೇರಿ ಇಡೀ ದೇಶದ ಜನರ ದಾರಿ ತಪ್ಪಿಸುವಂತಿದೆ ಎಂದು ಹೇಳಿದ್ದಾರೆ.
ರೈತರ ಸಾಲಮನ್ನಾ ವಿಚಾರದಲ್ಲಿ ಮುಖ್ಯಮಂತ್ರಿಗಳ ಕಚೇರಿ ಪತ್ರಿಕಾ ಪ್ರಕಟಣೆ ಹೊರಡಿಸಿದೆ. ಕರ್ನಾಟಕ ಸರ್ಕಾರ ಸಾರ್ವಜನಿಕರ ಮತ್ತು ತೆರಿಗೆದಾರರ ಹಣ ಪೋಲಾಗದಂತೆ, ಅತಿ ಎಚ್ಚರಿಕೆಯಿಂದ ಈ ಯೋಜನೆಯನ್ನು ಜಾರಿಗೊಳಿಸಿ ಅರ್ಹ ರೈತರಿಗೆ ಹಣ ಸೇರುವಂತೆ ಮಾಡುತ್ತಿದೆ. ಪ್ರತಿಯೊಬ್ಬ ಅರ್ಹ ರೈತನಿಗೆ ಈ ಯೋಜನೆಯ ಲಾಭ ದೊರೆಯುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಆಧಾರ್ ಮತ್ತು ಭೂ ದಾಖಲಾತಿಗಳ ಡಿಜಿಟಲ್ ದೃಢೀಕರಣ ಮತ್ತು ಪಡಿತರ ಚೀಟಿ ಇವುಗಳಿಂದ ಕೂಡಿರುವ ಮನ್ನಾ ಪ್ರಕ್ರಿಯೆ ವ್ಯವಸ್ಥೆಯು ಅತ್ಯಂತ ಸುರಕ್ಷಿತ ಮತ್ತು ದುರುಪಯೋಗಕ್ಕೆ ಆಸ್ಪದ ನೀಡುವುದಿಲ್ಲ. ಅರ್ಹ ರೈತರ ಖಾತೆಗೆ ಹಣ ಜಮೆಗೊಳ್ಳುತ್ತದೆ ಎಂದು ತಿಳಿಸಿದರು.
ಸುಮಾರು 60 ಸಾವಿರ ರೈತರ 350 ಕೋಟಿ ರೂ. ಸಾಲ ಮನ್ನಾದ ಮೊತ್ತವನ್ನು ನೇರವಾಗಿ ಅವರ ಖಾತೆಗೆ ಜಮೆ ಮಾಡಲಾಗಿದೆ. ಮುಂದಿನ ವಾರದಲ್ಲಿ ಇನ್ನೂ 1 ಲಕ್ಷ ರೈತರಿಗೆ 400 ಕೋಟಿ ರೂ.ಗಳನ್ನು ಜಮೆ ಮಾಡುವ ಉದ್ದೇಶ ಹೊಂದಲಾಗಿದೆ. ಈ ಪ್ರಕ್ರಿಯೆ 2019ರ ಜನವರಿ ಅಂತ್ಯದೊಳಗೆ ಪೂರ್ಣಗೊಳ್ಳಲಿದೆ. ಈ ಅವಧಿಯೊಳಗೆ ಎಲ್ಲ ಅರ್ಹ ರೈತರನ್ನು ನೋಂದಾಯಿಸಲಾಗುವುದು ಎಂದು ತಿಳಿಸಿದ್ದಾರೆ.