ತುಮಕೂರು,ಜ 21(MSP): ನಡೆದಾಡುವ ದೇವರೆಂದೇ ಖ್ಯಾತರಾದ ಡಾ| ಶಿವಕುಮಾರ ಸ್ವಾಮೀಜಿ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ಸಂತಾಪ ಸೂಚಿಸಿದ್ದು, ಮಂಗಳವಾರ ತುಮಕೂರಿಗೆ ಆಗಮಿಸಿ, ಶ್ರೀಗಳ ಅಂತಿಮ ದರ್ಶನ ಪಡೆಯಲಿದ್ದಾರೆ ಎಂದು ತಿಳಿದುಬಂದಿದೆ.
ಶ್ರೀಗಳ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಟ್ವೀಟ್ ಮಾಡಿದ ಪ್ರಧಾನಿ ಸಮಾಜ ಸೇವೆ, ಆಧ್ಯಾತ್ಮಿಕ, ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ ಹಾಗೂ ಸೌಲಭ್ಯ ವಂಚಿತರ ಹಕ್ಕುಗಳ ರಕ್ಷಣೆಗಾಗಿ ಉದ್ಧಾತ ಸೇವೆ ಸಲ್ಲಿಸುತ್ತಾ ನಮ್ಮ ಸಂಪ್ರದಾಯದ ಮೌಲ್ಯಗಳನ್ನು ಎತ್ತಿಹಿಡಿದ ಮಹಾಪುರುಷರು ಎಂದು ಶ್ರೀಗಳ ಗುಣಗಾನ ಮಾಡಿದ್ದಾರೆ.
ಈ ನಡುವೆ ಪ್ರಧಾನಿ ಮೋದಿ ಅವರ ಮಂಗಳವಾರದ ಎಲ್ಲಾ ನಿಗದಿಯಾದ ಕಾರ್ಯಕ್ರಮಗಳನ್ನು ರದ್ದು ಮಾಡಿದ್ದು, ಮಠಕ್ಕೆ ಆಗಮಿಸಿ, ಶ್ರೀಗಳ ಅಂತಿಮ ದರ್ಶನ ಪಡೆಯಲಿದ್ದಾರೆ ಎಂದು ಬಿಜೆಪಿ ತಿಳಿಸಿದೆ.