ಬೆಂಗಳೂರು, ಅ 27: ಡಿವೈಎಸ್ ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ.ಜಾರ್ಜ್ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಮತ್ತೆ ಪ್ರತಿಭಟನೆಗೆ ಅಣಿಯಾಗಿದೆ.
ಡಿವೈ ಎಸ್ಪಿ ಎಂ.ಕೆ. ಗಣಪತಿ ಸಾವು ಪ್ರಕರಣದಲ್ಲಿ ಸಚಿವ ಜಾರ್ಜ್, ಐ ಪಿ ಎಸ್ ಅಧಿಕಾರಿಗಳಾದ ಪ್ರಣವ್ ಮೊಹಂತಿ ಮತ್ತು ಎ. ಎಂ ಪ್ರಸಾದ್ ಮತ್ತೊಮ್ಮೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದೀಗ ಸಚಿವ ಜಾರ್ಜ್ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ.
ಗಣಪತಿ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ಕೋರಿ ಅವರ ತಂದೆ ಕುಡಾಲಪ್ಪ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ಸೆಪ್ಟೆಂಬರ್ 5 ರಂದು ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿತ್ತು. ಇನ್ನು ಇತ್ತ ಸಚಿವ ಜಾರ್ಜ್ ವಿರುದ್ಧ ಎಫ್ ಐ ಆರ್ ದಾಖಲಾದ ಬೆನ್ನಲ್ಲೇ ಬಿಜೆಪಿ ನಾಯಕರು ರಾಜಿನಾಮೆಗೆ ಒತ್ತಡ ಹೇರಿದ್ದಾರೆ.
ಡಿವೈಎಸ್ ಪಿ ಗಣಪತಿ ಆತ್ಮಹತ್ಯೆ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳು ನಿನ್ನೆಯಷ್ಟೇ ಸಚಿವ ಜಾರ್ಜ್ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದೆ.
ಹೀಗಾಗಿ, ಜಾರ್ಜ್ ಅವರು ಸಚಿವ ಸ್ಥಾನದಲ್ಲಿ ಮುಂದುವರೆಯಬಾರದು. ಒಂದೋ ಜಾರ್ಜ್ ರಾಜೀನಾಮೆ ನೀಡಬೇಕು. ಇಲ್ಲವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಲೇ ಸಚಿವ ಸ್ಥಾನದಿಂದ ವಜಾಗೊಳಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಒತ್ತಾಯಿಸಿದ್ದಾರೆ.