ಬೆಂಗಳೂರು,ಫೆ 25(MSP): ರಾಜಕೀಯ ಪ್ರಾತಿನಿಧ್ಯದಲ್ಲಿ ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿ ಜಾರಿಗೊಳಿಸುವಂತೆ ಆಗ್ರಹಿಸಿ ಫೆಬ್ರವರಿ 26 ರಂದು ಮಂಗಳೂರಿನಲ್ಲಿ ಬೃಹತ್ ಜಾಥಾ ಹಮ್ಮಿಕೊಳ್ಳಲಾಗಿದೆ. ಈ ಮೂಲಕ ಕೇಂದ್ರದ ಮೇಲೆ ಒತ್ತಡ ಹೇರಲು ಎಲ್ಲಾ ಜಿಲ್ಲೆಗಳಲ್ಲಿಯೂ ಬೃಹತ್ ಸಮಾವೇಶ ಆಯೋಜಿಸಲಾಗುವುದು ಎಂದು ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್ ತಿಳಿಸಿದ್ದಾರೆ.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆಸಿದ ಮಾಧ್ಯಮಗೋಷ್ಟಿಯಲ್ಲಿ ಭಾನುವಾರ ಮಾತನಾಡಿದ ಅವರು, ಲೋಕಸಭೆ ಮತ್ತು ವಿಧಾನಸಭೆಯಲ್ಲಿ ಮಹಿಳೆಯರಿಗೆ ಶೇ.೩೩ ರಷ್ಟು ಮೀಸಲಾತಿ ನೀಡಲು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಸಮ್ಮತಿ ಇದೆ. ಹೀಗಾಗಿ ಪ್ರಧಾನಿಯವರು ಮೀಸಲಾತಿ ಜಾರಿಗೆ ಮುಂದಾಗಬೇಕು. ಇದಕ್ಕಾಗಿ ಒತ್ತಡ ಹೇರಲು ಮಂಗಳೂರಿನ ಜಾಥಾ ನಡೆಸಿ ಬಳಿಕ ಎಲ್ಲ ಜಿಲ್ಲೆಗಳಲ್ಲೂ ಸಮಾವೇಶ ನಡೆಸಲಾಗುವುದು’ ಎಂದು ತಿಳಿಸಿದರು.
ಇದೇ ವೇಳೆ ಮಹಿಳಾ ಕಾಂಗ್ರೆಸ್ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಪ್ಸರಾ ರೆಡ್ಡಿ ಮಾತನಾಡಿ ಮಂಗಳೂರು ಜಾಥಾದ ಲಾಂಛನ ಬಿಡುಗಡೆ ಮಾಡಿದರು.
ಬೃಹತ್ ಜಾಥಾ ವನ್ನು ಮಧ್ಯಾಹ್ನ 3 ಗಂಟೆಗೆ ಆಯೋಜಿಸಿದ್ದು, ಇದೇ ವೇಳೆ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಕಚೇರಿಯಿಂದ ಕದ್ರಿ ಮೈದಾನದಲ್ಲಿ ನಡೆಯುವ ಸಮಾವೇಶದವರೆಗೆ ’ಮಹಿಳೆಯರ ಮಾನವ ಸರಪಳಿ’ಯನ್ನು ನಿರ್ಮಾಣ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.