ಕಾಸರಗೋಡು, ಫೆ 26(SM): ಯುವ ಕಾಂಗ್ರೆಸ್ ಕಾರ್ಯಕರ್ತರಾದ ಕೃಪೇಶ್ ಮತ್ತು ಶರತ್ ಲಾಲ್ ಕೊಲೆ ಪ್ರಕರಣದ ವಿಚಾರಣೆಯನ್ನು ಸಿಬಿಐಗೆ ಒಪ್ಪಿಸಬೇಕು. ಕೃತ್ಯಕ್ಕೆ ಸಂಚು ನಡೆಸಿದವರನ್ನು ಬಂಧಿಸಬೇಕು ಮೊದಲಾದ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ನೇತೃತ್ವದಲ್ಲಿ 48ಗಂಟೆಗಳ ಉಪವಾಸ ಸತ್ಯಾಗ್ರಹ ಮಂಗಳವಾರ ಆರಂಭಗೊಂಡಿದೆ.
ಜಿಲ್ಲಾಧಿಕಾರಿ ಕಚೇರಿ ಪರಿಸರದಲ್ಲಿ ನಡೆಯುತ್ತಿರುವ ಧರಣಿಯನ್ನು ಕೆಪಿಸಿಸಿ ಮಾಜಿ ಅಧ್ಯಕ್ಷ ವಿ. ಎಂ. ಸುಧೀರನ್ ಉದ್ಘಾಟಿಸಿದರು. ತಮ್ಮ ವಿರುದ್ಧ ಧ್ವನಿ ಎತ್ತುವವರನ್ನು ನಿರ್ಮೂಲನೆ ಗೊಳಿಸುತ್ತಿರುವುದು ಸಿಪಿಎಂನ ರಾಜಕೀಯವಾಗಿದೆ ಎಂದು ಧರಣಿ ನಿರತರು ಆರೋಪಿಸಿದರು. ಆದುದರಿಂದ ಕಾಂಗ್ರೆಸ್ ಕಾರ್ಯಕರ್ತರ ಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸುವಂತೆ ಒತ್ತಾಯಿಸಿದರು.
ಕೇರಳದಲ್ಲಿ ಸಿಪಿಎಂ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದು ಮೂರು ವರ್ಷವಾಗುತ್ತಿದ್ದು, ಇದುವರೆಗೆ 20ರಷ್ಟು ರಾಜಕೀಯ ಕೊಲೆ ನಡೆದಿದೆ. ತಮ್ಮನ್ನು ವಿರೋಧಿಸುವವರನ್ನು ಸದೆ ಬಡಿಯುವುದು ಸಿಪಿಎಂನ ತಂತ್ರವಾಗಿದೆ ಎಂದು ಆರೋಪಿಸಿದರು. ಯುವ ಕಾಂಗ್ರೆಸ್ ಕಾರ್ಯಕರ್ತರ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗ ಬಂಧಿತರಾದವರು ನೈಜ ಆರೋಪಿಗಳಲ್ಲ ಎಂದು ಧರಣಿ ನಿರತರು ಆರೋಪಿಸಿದ್ದು, ನೈಜ ಆರೋಪಿಗಳ ಬಂಧನವಾಗಬೇಕಿದೆ ಎಂದು ಒತ್ತಾಯಿಸಿದರು.