ಉಡುಪಿ,ಮಾ.10(AZM) :ಲೋಕಸಭಾ ಚುನಾವಣೆಯಲ್ಲಿ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಸೀಟು ನೀಡಬೇಕೆಂದು ಪಕ್ಷದ ಹೈಕಮಾಂಡ್ ಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಆಗ್ರಹಿಸಿದೆ.
ಇಂದು ಉಡುಪಿ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳಲಾಗಿದೆ.
ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಜೆ.ಡಿ.ಎಸ್. ಪಕ್ಷವು ಪಂಚಾಯತ್ ವ್ಯಾಪ್ತಿಯಲ್ಲಿ ಜನಪ್ರತಿನಿಧಿಗಳನ್ನು ಹೊಂದಿಲ್ಲ. ಹಾಗೆಯೇ ಬ್ಲಾಕ್ ಮಟ್ಟದಲ್ಲಿಯೂ ಸಂಘಟನೆಯು ಕ್ರಿಯಾಶೀಲವಾಗಿಲ್ಲ. ಆದರೆ ಕಾಂಗ್ರೆಸ್ ಪಕ್ಷವು ಬೂತ್ ಮಟ್ಟದಲ್ಲಿ ಕಾರ್ಯಕರ್ತರನ್ನು ಹೊಂದಿ ಕ್ರಿಯಾಶೀಲ ಮುಖಂಡರನ್ನು ಹೊಂದಿದ್ದು ಜಿಲ್ಲಾ ವ್ಯಾಪ್ತಿಯಲ್ಲಿ ಬಲಿಷ್ಠವಾಗಿದೆ. ಇದಕ್ಕೆ ಉದಾಹರಣೆ ಮಾರ್ಚ್ 10 ರಂದು ಉಡುಪಿ ಜಿಲ್ಲೆಯಲ್ಲಿ ನಡೆದ ಪರಿವರ್ತನಾ ಯಾತ್ರೆಯಲ್ಲಿ ಕಾರ್ಯಕರ್ತರು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿರುವುದೇ ಮುಖ್ಯ ಸಾಕ್ಷಿ ಎಂದು ಹೇಳಲಾಗಿದೆ. ಹಾಗಾಗಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯೇ ಚುನಾವಣೆಯಲ್ಲಿ ಸ್ಪರ್ಧಿಸಬೇಕೆಂದು ಸಭೆಯಲ್ಲಿ ನಿರ್ಣಯಿಸಿ,ಹೈಕಮಾಂಡ್ ಗೆ ಆಗ್ರಹಿಸಲಾಗಿದೆ.
ಈ ಸಂದರ್ಭದಲ್ಲಿ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಎಂ.ಎ. ಗಫೂರ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಿ. ನರಸಿಂಹ ಮೂರ್ತಿ, ಕಿಶನ್ ಹೆಗ್ಡೆ ಕೊಳ್ಕೆಬೈಲ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.