ಉಡುಪಿ, ಮಾ 15(SM): ಕಾಂಗ್ರೆಸ್ ಹೈಕಮಾಂಡ್ ನಿರ್ಧಾರದ ವಿರುದ್ಧ ಹೋಗಿರುವ ಉಡುಪಿ ಜಿಲ್ಲಾ ಕಾಂಗ್ರೆಸ್ ನಾಯಕರ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಾಗಿದೆ.
ಲೋಕಸಭಾ ಚುನಾವಣೆಗೆ ಉಡುಪಿ-ಚಿಕ್ಕಮಗಳೂರು ಲೋಕಾಸಭಾ ಕ್ಷೇತ್ರಕ್ಕೆ ಕಾಂಗ್ರೇಸ್ ಪಕ್ಷದ ಅಭ್ಯರ್ಥಿಗೆ ಅವಕಾಶ ನೀಡದೆ ಜೆಡಿಎಸ್ ಪಕ್ಷಕ್ಕೆ ಬಿಟ್ಟು ಕೊಡಲಾಗಿದೆ. ಉಡುಪಿ ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧಿಸಲು ಹಲವು ನಾಯಕರು ಉತ್ಸುಕರಾಗಿದ್ದರು. ಆದರೆ ಪಕ್ಷ ಇಲ್ಲಿ ಜೆಡಿಎಸ್ ಗೆ ಅವಕಾಶ ನೀಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನ ಆಕಾಂಕ್ಷಿಗಳಿಗೆ ನಿರಾಸೆ ಉಂಟಾಗಿತ್ತು. ಈ ಹಿನ್ನೆಲೆ ಹೈಕಮಾಂಡ್ ನಿರ್ಧಾರವನ್ನು ಜಿಲ್ಲಾ ನಾಯಕರು ವಿರೋಧಿಸಿದ್ದರು.
ಅಲ್ಲದೆ ಹೈಕಮಾಂಡ್ನ ನಿರ್ಧಾರವನ್ನು ಖಂಡಿಸಿ ಟಯರ್ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದರು. ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿಶ್ವಾಸ್ ಅಮೀನ್, ಜಿಲ್ಲಾ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ಯತೀಶ್ ಕರ್ಕೇರಾ, ಇಮ್ರಾನ್ ಹಾಗೂ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಆದರೆ, ಯಾವುದೇ ಪರವಾನಿಗೆ ಇಲ್ಲದೆ ಧಿಡೀರ್ ಪ್ರತಿಭಟನೆ ನಡೆಸಿ ಸಾರ್ವಜನಿಕರಿಗೆ ತೊಂದರೆ ಉಂಟು ಮಾಡಿರುವುದಾಗಿದೆ. ಉಡುಪಿ ನಗರ ಪೊಲೀಸ್ ಠಾಣೆ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.