ಮಂಗಳೂರು, ಮಾ25(SS): ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಆಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಬಿಜೆಪಿ ಮುಖಂಡರು ಹಾಗೂ ಬೆಂಬಲಿಗರೊಂದಿಗೆ ತೆರಳಿ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.
ನಗರದ ಬಿಜೆಪಿ ಚುನಾವಣಾ ಕಾರ್ಯಾಲಯದಲ್ಲಿ ಕಾರ್ಯಕರ್ತರ ಸಮಾವೇಶ ನಡೆಸಿದ ಬಳಿಕ, ಪಕ್ಷದ ಪ್ರಮುಖರ ಜತೆ ನಳಿನ್ ಕುಮಾರ್ ಕಟೀಲ್ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾ ಚುನಾವಣಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರಿಗೆ ನಾಮಪತ್ರ ಸಲ್ಲಿಸಿದ್ದಾರೆ.
ಈ ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ನಳಿನ್ ಕುಮಾರ್ ಕಟೀಲ್, ಪಕ್ಷದ ಹಿರಿಯರು ನನ್ನ ಮೇಲೆ ವಿಶ್ವಾಸವಿಟ್ಟು, ಮೂರನೇ ಬಾರಿಗೆ ಅವಕಾಶ ನೀಡಿದ್ದಾರೆ. ದೇವರ, ಹಿರಿಯರ ಆಶೀರ್ವಾದ ಪಡೆದು ಇಂದು ನಾಮಪತ್ರ ಸಲ್ಲಿಸಿದ್ದೇನೆ. ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಕಾರ್ಕಳ ಶಾಸಕ ಸುನಿಲ್ ಕುಮಾರ್ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸದ್ಯ 2 ಬಾರಿದಕ್ಷಿಣ ಕನ್ನಡಲೋಕಸಭಾ ಕ್ಷೇತ್ರದಲ್ಲಿ ಗೆದ್ದಿರುವ ನಳಿನ್ ಕುಮಾರ್ ಕಟೀಲ್, ಈ ಬಾರಿಯ ಚುನಾವಣೆಯಲ್ಲಿಯೂ ಗೆಲ್ಲಲು ಪಕ್ಷದ ಕಾರ್ಯಕರ್ತರು ಕಾರ್ಯತಂತ್ರ ರೂಪಿಸುತ್ತಿದ್ದಾರೆ.