ಕುಂದಾಪುರ, ಎ04(SS): ದೇಶದ ಯುವಕರು ಮೋದಿ ಮೋದಿ ಎಂಬ ಭ್ರಮೆಯಲ್ಲಿ ಬದುಕುತ್ತಿದ್ದಾರೆ ಎಂದು ಎಂದು ರಾಜ್ಯ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.
ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಜೆಡಿಎಸ್ ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ಪರವಾಗಿ ಕುಂದಾಪುರದಲ್ಲಿ ನಡೆದ ಮಹಿಳಾ ಮೀನುಗಾರರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಳೆದ ಐದು ವರ್ಷಗಳಲ್ಲಿ ನರೇಂದ್ರ ಮೋದಿ ಕೇವಲ ಮಾತಿನ ಭರವಸೆಯನ್ನು ಮಾತ್ರ ನೀಡಿದ್ದಾರೆ. ಆದರೆ ಭರವಸೆಯ ಹೊರತು ದೇಶದ ಯುವಕರಿಗಾಗಿ ಯಾವುದೇ ಯೋಜನೆಯನ್ನು ಜಾರಿಗೆ ತಂದಿಲ್ಲ ಎಂದು ಆರೋಪಿಸಿದ್ದಾರೆ.
ದೇಶದ ಸೈನಿಕರ ಹೆಸರನ್ನು ದುರಪಯೋಗಪಡಿಸಿಕೊಂಡು, ಅವರ ಪ್ರಾಣದ ಜೊತೆ ಚೆಲ್ಲಾಟ ಆಡುವ ಏಕೈಕ ಪ್ರಧಾನಿ ಮೋದಿ. ಮೋದಿಯವರು ಬಡವರ ಪರ ಒಂದೇ ಒಂದು ಕಾರ್ಯಕ್ರಮ ಅಥವಾ ಉದ್ಯೋಗ ಸೃಷ್ಟಿಯ ಯಾವುದೇ ಕಾರ್ಯಕ್ರಮಗಳನ್ನು ಮಾಡಿಲ್ಲ. ಆದರೂ ಯುವಕರು ಮೋದಿ ಮೋದಿ ಎಂಬ ಭ್ರಮೆಯಲ್ಲಿದ್ದಾರೆ ಎಂದು ವ್ಯಂಗ್ಯವಾಡಿದರು.
ರಾಜ್ಯದಲ್ಲಿ ಸಮ್ಮಿಶ್ರ ಸರಕಾರ ಆಡಳಿತ ಬಂದ ನಂತರ ಕರಾವಳಿ ಭಾಗದಲ್ಲಿ ಯಾವುದೇ ಗಲಭೆಗಳಿಗೆ ಅವಕಾಶ ಕಲ್ಪಿಸದೆ ಶಾಂತಿ ಹಾಗೂ ನೆಮ್ಮದಿ ವಾತಾವಾರಣವನ್ನು ನಿರ್ಮಾಣ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿ ಜಿಲ್ಲೆಯಲ್ಲಿ ಹೊಸ ಕೈಗಾರಿಕೆಗೆ ಅವಕಾಶ ನೀಡಿ ಯುವಕರಿಗೆ ಉದ್ಯೋಗ ಕೊಡಿಸುವ ಯೋಜನೆಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಮೀನುಗಾರಿಕೆ ಕೂಡ ಕೃಷಿ ಆಗಿದೆ. ಆದುದರಿಂದ ಮೀನುಗಾರ ಮಹಿಳೆಯರು, ಯುವಕರು ನಡೆಸುವ ಮೀನುಗಾರರಿಗೆ ಶಾಶ್ವತವಾದ ಯೋಜನೆಯನ್ನು ಜಾರಿಗೆ ತರುವ ಬಗ್ಗೆ ರಾಜ್ಯ ಸಮ್ಮಿಶ್ರ ಸರಕಾರ ಈಗಾಗಲೇ ಚಿಂತನೆ ನಡೆಸಿದೆ. 45 ಸಾವಿರ ಕೋಟಿ ರೂ. ರೈತರ ಸಾಲ ಮನ್ನಾ ಮಾಡಿರುವ ಸರಕಾರಕ್ಕೆ ಮೀನುಗಾರರ ರಾಷ್ಟ್ರೀಕೃತ ಹಾಗೂ ಸಹಕಾರಿ ಸಂಘಗಳಲ್ಲಿನ ನೂರಾರು ಕೋಟಿ ರೂ. ಸಾಲ ದೊಡ್ಡ ಹೊರೆ ಆಗಲ್ಲ ಎಂದು ತಿಳಿಸಿದರು.
ಚುನಾವಣೆಯ ನಂತರ ಒಂದು ದಿನ ಕರಾವಳಿ ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಮೀನುಗಾರರ ಸಮಸ್ಯೆ ಬಗ್ಗೆ ಚರ್ಚಿಸಿ ಪರಿಹಾರಕ್ಕೆ ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು.