ಉಡುಪಿ, ಏ 4(SM): ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಸಾರ್ವಜನಿಕ ಹಿತದೃಷ್ಟಿಯಿಂದ ಶಾಂತಿ ಪಾಲನೆ, ಕಾನೂನು ಸುವ್ಯವಸ್ಥೆ ಮತ್ತು ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಹಾಗೂ ಚುನಾವಣಾ ಕಾರ್ಯಗಳು ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ಶಾಂತಿಯುತ ವಾತಾವರಣದಲ್ಲಿ ನಡೆಸಲು ಅನುಕೂಲವಾಗುವಂತೆ ಮತದಾನ ಪ್ರಾರಂಭವಾಗುವ ದಿನಾಂಕದ 48 ಗಂಟೆಗಳ ಮುಂಚಿತವಾಗಿ ಮದ್ಯ ಮಾರಾಟ ನಿಷೇಧಿಸಲಾಗಿದೆ.
ಏಪ್ರಿಲ್ 18ರಂದು ಕರಾವಳಿಯಲ್ಲಿ ಚುನಾವಣೆ ನಡೆಯಲಿದ್ದು, ಈ ಹಿನ್ನೆಲೆ ಎಪ್ರಿಲ್ 16 ರಂದು ಸಂಜೆ 6 ಗಂಟೆಯಿಂದ ಮತದಾನದ ದಿನ ಅಂದರೆ ಎಪ್ರಿಲ್ 18ರ ಮಧ್ಯರಾತ್ರಿ 12ರ ವರೆಗೆ ಉಡುಪಿ ಜಿಲ್ಲೆಯಾದ್ಯಂತ ಎಲ್ಲಾ ರೀತಿಯ ಮದ್ಯ ಮಾರಾಟ ನಿಷೇಧಿಸಲಾಗಿದೆ.
ಮದ್ಯ ಮಾರಾಟ ಡಿಪೋಗಳನ್ನು, ಮದ್ಯ ತಯಾರಿಕಾ ಡಿಸ್ಟಿಲರಿಗಳನ್ನು, ಸ್ಟಾರ್ ಹೋಟೆಲ್ಗಳನ್ನು, ಶೇಂದಿ ಅಂಗಡಿಗಳನ್ನು ಮುಚ್ಚುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಆದೇಶ ಹೊರಡಿಸಿದ್ದಾರೆ.
ಈ ಆದೇಶದಂತೆ ಸೂಚಿಸಿರುವ ದಿನಗಳಲ್ಲಿ ಜಿಲ್ಲೆಯಾದ್ಯಂತ ಯಾವುದೇ ಹೋಟೆಲ್ಗಳಲ್ಲಿ, ಕ್ಲಬ್ಗಳಲ್ಲಿ ಹಾಗೂ ಶೇಂದಿ ಅಂಗಡಿಗಳಲ್ಲಿ ಮದ್ಯ ಮಾರಾಟ ಹಾಗೂ ಸರಬರಾಜು ಮಾಡುವುದನ್ನು ನಿಷೇಧಿಸುವಂತೆ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಇನ್ನು ಶಿವಮೊಗ್ಗ ಲೋಕಸಭಾ ಚುನಾವಣೆ ಏಪ್ರಿಲ್ 23ರಂದು ನಡೆಯಲಿದ್ದು, ಈ ವ್ಯಾಪ್ತಿಗೆ ಒಳಪಡುವ ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಎಪ್ರಿಲ್ 23ರಂದು ಮತದಾನ ನಡೆಸಲು ಚುನಾವಣಾ ವೇಳಾ ಪಟ್ಟಿಯಲ್ಲಿ ಘೋಷಣೆ ಮಾಡಲಾಗಿದೆ. ಈ ಸಂದರ್ಭದಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಉಡುಪಿ ಜಿಲ್ಲೆಯ ಕುಂದಾಪುರ ಹಾಗೂ ಬೈಂದೂರು ತಾಲೂಕು ವ್ಯಾಪ್ತಿಯಲ್ಲಿ ಎಪ್ರಿಲ್ 21ರಂದು ಸಂಜೆ 6ರಿಂದ ಎಪ್ರಿಲ್ 23ರ ಮಧ್ಯರಾತ್ರಿ 12 ರ ವರೆಗೆ ಮದ್ಯ ಸಾಗಾಟ, ಮಾರಾಟ ನಿಷೇಧಿಸಲಾಗಿದೆ.