ಮಂಗಳೂರು,ಏ 12(MSP): "ಆಳ ಸಮುದ್ರ ಮೀನುಗಾರಿಕೆಗೆ ತೆರಳಿ ನಾಪತ್ತೆಯಾದ ಮೀನುಗಾರರನ್ನು ಪತ್ತೆಹಚ್ಚಲು ಕೇಂದ್ರ ಸರ್ಕಾರ ವಿಫಲವಾಗಿದೆ " ಎಂದು ಮಾಜಿ ಶಾಸಕ ಜೆ.ಆರ್ ಲೋಬೋ ಹೇಳಿದ್ದಾರೆ.
ನಗರದ ಕಾಂಗ್ರೆಸ್ ಚುನಾವಣಾ ಕಚೇರಿಯಲ್ಲಿ ಏ.13 ರ ಶುಕ್ರವಾರ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿ, ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿ ನಾಪತ್ತೆಯಾದ ಮೀನುಗಾರರನ್ನು ಪತ್ತೆಹಚ್ಚಲು, ರಾಜ್ಯ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡಿದ್ದು, ಆದರೆ ಕೇಂದ್ರ ಸರ್ಕಾರ ಕೇವಲ ಭರವಸೆಗಳನ್ನು ಮಾತ್ರ ನೀಡುತ್ತಾ ಕೈಕಟ್ಟಿ ಕುಳಿತು ಮೊಸಳೆ ಕಣ್ಣೀರು ಹಾಕಿದೆ ಎಂದು ಆರೋಪಿಸಿದರು.
ಕಾಂಗ್ರೆಸ್ ಪಕ್ಷ ಯಾವಾಗಲೂ ಸಾಮಾನ್ಯ ಜನರೊಂದಿಗೆ ಇದ್ದು, ಅಭಿವೃದ್ಧಿಯ ಮೇಲೆ ಗಮನ ಕೇಂದ್ರೀಕರಿಸಿದೆ. ಆದರೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಆಡಳಿತದಲ್ಲಿ ಕಳೆದ ಐದು ವರ್ಷದಲ್ಲಿ ದೇಶದ ಆರ್ಥಿಕ ಸ್ಥಿತಿ ತಳಮಟ್ಟಕ್ಕೆ ತಲುಪಿದೆ. ನಿರುದ್ಯೋಗ ಹೆಚ್ಚಾಗಿದೆ ಯಾವುದೇ ಬಡವರ ಪರ ಕೆಲಸ ಕಾರ್ಯಗಳಾಗಿಲ್ಲ ಎಂದರು.
ಕಳೆದ 28 ವರ್ಷಗಳಿಂದ ಜಿಲ್ಲೆಯಲ್ಲಿ ಬಿಜೆಪಿಯ ಅಧಿಕಾರದಲ್ಲಿದ್ದಾಗ ಯಾವುದೇ ಅಭಿವೃದ್ದಿ ಕಾರ್ಯ ನಡೆಸಿಲ್ಲ. ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪೂರ್ತಿಯಾಗಿಲ್ಲ ಹೀಗಾಗಿ ಅಭ್ಯರ್ಥಿ ನಳಿನ್ಕುಮಾರ್ ಕಟೀಲು ಗೆಲುವಾಗಲಿ, ಬಿಜೆಪಿ ಗೆಲುವಾಗಲಿ ಅದು ಅಸಾಧ್ಯ ಎಂದರು.